ಚಿಕ್ಕನಾಯಕನಹಳ್ಳಿ: ಪಟ್ಟಣದ 6 ನೇ ವಾರ್ಡ್ ವ್ಯಾಪ್ತಿಯ ಕೇದಿಗೇಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಕೊರತೆ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಕೇದಿಗೇಹಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ, ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕ ಇನ್ನೂ ಕಾರ್ಯಾರಂಭ ಮಾಡದಿರುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿದೆ. ಜನರಿಗೆ ಶುದ್ಧ ಕುಡಿಯುವ ನೀರು, ಒದಗಿಸುವ ಉದ್ದೇಶದಿಂದ ನಿರ್ಮಿಸಲಾದ ಘಟಕ ಬಳಕೆಗೆ ಬಾರದಿರುವುದಕ್ಕೆ ಜಿಲ್ಲಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ದೀಪಗಳನ್ನು ಪುರಸಭೆಯವರೇ ತೆಗೆದುಕೊಂಡು ಹೋಗಿರುವ ಘಟನೆ ಕೂಡ ಗಮನಕ್ಕೆ ಬಂದಿದ್ದು, ಈ ಕುರಿತು ಪರಿಶೀಲನೆ ನಡೆಸಲಾಯಿತು. ಇದೇ ವೇಳೆ, ಕೇದಿಗೇಹಳ್ಳಿ ನಿವಾಸಿಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳ ಸಮಸ್ಯೆಗಳನ್ನು ಮುಂದಿನ ವಾರದೊಳಗೆ ಬಗೆಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗೆ ಸೂಚನೆ ನೀಡಿದರು.
ಅಧಿಕಾರಿಗಳು ಗೈರು: ಶಿಸ್ತಿನ ಕ್ರಮದ ಎಚ್ಚರಿಕೆ
ಸ್ಥಳದಲ್ಲಿ ಸಾರ್ವಜನಿಕರ ಸಮಸ್ಯೆ ಪರಿಶೀಲಿಸುವಾಗ ಸಂಬಂಧಪಟ್ಟ ಪುರಸಭಾ ಅಧಿಕಾರಿಗಳ ಗೈರುಹಾಜರಿಗೆ ಜಿಲ್ಲಾಧಿಕಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪುರಸಭೆಯ ಮುಖ್ಯಾಧಿಕಾರಿ ಹಾಗೂ ಎಂಜಿನಿಯರ್ ಮಂಜುನಾಥ್ ಅವರ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ಮಮತಾ ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
