ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮತ್ತೆ ಹಿಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುನ್ನೆಚ್ಚರಿಕೆಯಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 23ರಿಂದ 25ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಸನ ಜಿಲ್ಲೆಯಲ್ಲಿಯೂ ಅಕ್ಟೋಬರ್ 23ರಿಂದ ಮುಂದಿನ ಮೂರು ದಿನ ಮಳೆ ಬಿರುಸುಗೊಳ್ಳುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಇದಲ್ಲದೆ, ಮಂಡ್ಯ ಜಿಲ್ಲೆಯಲ್ಲಿ ಅಕ್ಟೋಬರ್ 25ರಂದು, ಕೋಲಾರ ಜಿಲ್ಲೆಯಲ್ಲಿ ಅಕ್ಟೋಬರ್ 26ರಂದು ಹಾಗೂ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 22ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಅಕ್ಟೋಬರ್ 24 ಅಥವಾ 25ರ ವೇಳೆಗೆ ಇದು ಚಂಡಮಾರುತವಾಗಿ ರೂಪುಗೊಳ್ಳಬಹುದು ಎಂದು ಹಿರಿಯ ಹವಾಮಾನ ತಜ್ಞ ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.ಹೀಗಾಗಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಗಮನಿಸುವುದು ಅಗತ್ಯವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
