ಕೆ.ಆರ್.ಪೇಟೆ: ತಾಲ್ಲೂಕಿನ ಹಿರಿಕಳಲೆ ಗ್ರಾಮದ ಸಮೀಪ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳುತ್ತಿದ್ದ ವ್ಯಕ್ತಿಯ ನೆರವಿಗೆ ಶಾಸಕ ಹೆಚ್.ಟಿ. ಮಂಜು ಧಾವಿಸಿ ಮಾನವೀಯತೆ ಮೆರೆದಿದ್ದಾರೆ.
ಶಾಸಕ ಹೆಚ್.ಟಿ. ಮಂಜು ಅವರು ಅದೇ ಮಾರ್ಗವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಗಮನಿಸಿದ್ದಾರೆ. ತಕ್ಷಣವೇ ತಮ್ಮ ಕಾರಿನಿಂದ ಕೆಳಗಿಳಿದ ಶಾಸಕರು, ಗಾಯಾಳುವಿನ ಪರಿಸ್ಥಿತಿಯನ್ನು ಗಮನಿಸಿ ಆತನಿಗೆ ಅಗತ್ಯ ನೆರವು ನೀಡಲು ಮುಂದಾಗಿದ್ದಾರೆ.
ತಡಮಾಡದೆ ಆಂಬುಲೆನ್ಸ್ಗೆ ಕರೆ ಮಾಡಿ, ಗಾಯಗೊಂಡ ವ್ಯಕ್ತಿಯನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ನೆರವು ನೀಡಿದ್ದಾರೆ. ಅಪಘಾತದ ಸಂದರ್ಭದಲ್ಲಿ ಗಾಯಾಳುವಿಗೆ ಸಕಾಲದಲ್ಲಿ ನೆರವು ದೊರಕಿಸುವ ನಿಟ್ಟಿನಲ್ಲಿ ಶಾಸಕರು ತೋರಿದ ಕಾಳಜಿ ಸಾರ್ವಜನಿಕರ ಗಮನ ಸೆಳೆದಿದೆ.
ಜನಪ್ರತಿನಿಧಿಗಳು ಕೇವಲ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಸೀಮಿತರಾಗದೆ, ಸಂಕಷ್ಟದಲ್ಲಿರುವ ಜನರ ನೆರವಿಗೂ ಧಾವಿಸಬೇಕು ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಜೀವ ರಕ್ಷಣೆಗೆ ತಕ್ಷಣ ಸ್ಪಂದಿಸಿದ ಶಾಸಕ ಹೆಚ್.ಟಿ. ಮಂಜು ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಶಾಸಕರ ಈ ಮಾನವೀಯ ನಡೆ ಸಾಮಾಜಿಕ ಜವಾಬ್ದಾರಿ ಹಾಗೂ ಜನಸೇವೆಯ ಮಹತ್ವವನ್ನು ಎತ್ತಿಹಿಡಿದಿದೆ.
ವರದಿ:- ಮಂಜು ಶ್ರವಣೂರು, ಹೊಳೆನರಸೀಪುರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
