ಬೆಂಗಳೂರು: ರಾಜಧಾನಿ ಬೆಂಗಳೂರಿನ ಐಟಿ (IT) ಕಂಪನಿಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಮತ್ತು ಮಾತೃಭಾಷೆ ಕನ್ನಡ ಎಂಬ ಕಾರಣಕ್ಕೆ ಉದ್ಯೋಗಾವಕಾಶಗಳನ್ನು ನಿರಾಕರಿಸಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿದ್ದು, ಈ ವಿಚಾರೀಗ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.
ಉದ್ಯೋಗಾವಕಾಶಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಖಾಸಗಿ ಸಂಸ್ಥೆಗಳಿಗೆ ಹಾಗೂ ಕಂಪನಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಿಸುತ್ತಿರುವ ಬಗ್ಗೆ ಕೇಳಿಬರುತ್ತಿರುವ ದೂರುಗಳು ವಿಷಾದನೀಯ. ಕನ್ನಡ ಭಾಷಿಕರನ್ನು ಕಡೆಗಣಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ, ಯಾವುದೇ ಖಾಸಗಿ ಸಂಸ್ಥೆಯು ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸಿರುವುದು ಕಂಡುಬಂದರೆ ಅಂತಹ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಸಹ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡಿಗರ ಸ್ವಾಭಿಮಾನದ ವಿಚಾರದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ರಾಜಧಾನಿಯಾಗಿ ಬೆಳೆದು ನಿಲ್ಲಲು ಕನ್ನಡಿಗರ ಪರಿಶ್ರಮ, ಪ್ರತಿಭೆ ಹಾಗೂ ಬೌದ್ಧಿಕ ಸಾಮರ್ಥ್ಯವೇ ಪ್ರಮುಖ ಕಾರಣ. ಅರ್ಹತೆ ಇಲ್ಲದೆ ಉದ್ಯೋಗ ತಿರಸ್ಕರಿಸುವುದು ಬೇರೆ, ಆದರೆ ಮಾತೃಭಾಷೆ ಕನ್ನಡ ಎಂಬ ಒಂದೇ ಕಾರಣಕ್ಕೆ ಕೆಲಸ ನಿರಾಕರಿಸುವ ಉದ್ಧಟತನವನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ. ಕನ್ನಡಿಗರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ.
— ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಸಚಿವ
ಒಂದೆಡೆ ಸರ್ಕಾರ ಕನ್ನಡಿಗರ ಹಕ್ಕುಗಳ ರಕ್ಷಣೆಗೆ ಭರವಸೆ ನೀಡುತ್ತಿದ್ದರೂ, ಇನ್ನೊಂದೆಡೆ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕರಡು ವಿಧೇಯಕ (Bill) ಕಳೆದ ಒಂದೂವರೆ ವರ್ಷದಿಂದ ಪೆಂಡಿಂಗ್ ನಲ್ಲಿರುವುದು ಈಗ ಮತ್ತೆ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕದ ನೆಲದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳು ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು ಹಾಗೂ ಕನ್ನಡಿಗರಿಗೆ ತಾರತಮ್ಯ ಎದುರಾದರೆ ನೇರವಾಗಿ ಸರ್ಕಾರಕ್ಕೆ ದೂರು ನೀಡಬಹುದು ಎಂದು ಸಚಿವರು ತಿಳಿಸಿದ್ದಾರೆ. ಆದರೆ, ವರ್ಷಗಳಿಂದ ಬಾಕಿ ಉಳಿದಿರುವ ಮೀಸಲಾತಿ ವಿಧೇಯಕಕ್ಕೆ ಸರ್ಕಾರ ಜೀವ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
