ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ. ಮೃತರನ್ನು ನಿಸರ್ಗ (20) ಮತ್ತು ರೂಪಾ (21) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ವಿಜಯಪುರದಿಂದ ಡಿಸೈರ್ ಕಾರಿನಲ್ಲಿ ಮೂವರು ಯುವತಿಯರು ಹಾಗೂ ಚಾಲಕ ಸೇರಿ ನಾಲ್ವರು ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು. ಬಿ.ಫಾರ್ಮಾ ಪದವಿ ಪೂರ್ಣಗೊಳಿಸಿದ್ದ ಯುವತಿಯರು ಉದ್ಯೋಗ ಸಂದರ್ಶನದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಚಾಲಕ ಪವನ್ ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದು, ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಟಾಟಾ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ತೀವ್ರತೆಗೆ ನಿಸರ್ಗ ಮತ್ತು ರೂಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಯುವತಿ ಹಾಗೂ ಕಾರು ಚಾಲಕ ಪವನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಎದುರಿನಿಂದ ಬರುತ್ತಿದ್ದ ಟಾಟಾ ಕಾರಿನಲ್ಲಿದ್ದ ನಾಲ್ವರೂ ಗಾಯಗೊಂಡಿದ್ದಾರೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಯುವತಿಯರ ಸಾವಿನಿಂದ ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ.
ಘಟನೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಶಿರಾ ಡಿವೈಎಸ್ಪಿ ಹಾಗೂ ಶಿರಾ ಗ್ರಾಮಾಂತರ ಸಿಪಿಐ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
