ತುಮಕೂರು: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗೆ ಕಾರ್ಮಿಕನೊಬ್ಬ ಚಾಲನೆಯಲ್ಲಿದ್ದ ಯಂತ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸಾಕ ಸಿಮೆಂಟ್ ಶೀಟ್ ಕಾರ್ಖಾನೆಯಲ್ಲಿ ತಡರಾತ್ರಿ ನಡೆದಿದೆ.
ಮೃತ ಕಾರ್ಮಿಕನನ್ನು ಗುಬ್ಬಿ ತಾಲ್ಲೂಕಿನ ಮಂಚಲದೊರೆ ಭಾಗದ ವಿಜಯ್ ಎಂದು ಗುರುತಿಸಲಾಗಿದೆ. ಬುಧವಾರ ತಡರಾತ್ರಿ ಸುಮಾರು 11.30ರಿಂದ 12 ಗಂಟೆಯ ನಡುವಿನ ಅವಧಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಯಂತ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಅವರನ್ನು ತುಮಕೂರಿನ ಶ್ರೀದೇವಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾರ್ಖಾನೆಯಲ್ಲಿ ಕಾರ್ಮಿಕರ ಸುರಕ್ಷತೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬ ಪ್ರಶ್ನೆಗಳು ಘಟನೆಯ ಬಳಿಕ ಕೇಳಿ ಬಂದಿವೆ.
ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನನ್ನು ಚಾಲನೆಯಲ್ಲಿದ್ದ ಯಂತ್ರದ ಬಳಿ ಕೆಲಸಕ್ಕೆ ನಿಯೋಜಿಸಿದ್ದರ ಕುರಿತು ಕಾರ್ಮಿಕ ವಲಯದಲ್ಲಿ ಅನುಮಾನಗಳು ವ್ಯಕ್ತವಾಗಿವೆ.
ಕಾರ್ಮಿಕರಿಗೆ ಸೂಕ್ತ ಸುರಕ್ಷತಾ ಸೌಲಭ್ಯಗಳನ್ನು ಒದಗಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆಯೇ ಎಂಬ ಆರೋಪಗಳೂ ಕೇಳಿಬಂದಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ವಾಸ್ತವಾಂಶಗಳನ್ನು ಬಹಿರಂಗ ಪಡಿಸಬೇಕೆಂಬ ಒತ್ತಾಯ ವ್ಯಕ್ತವಾಗಿದೆ.
ಕಾರ್ಮಿಕ ವಿಜಯ್ ಅವರ ಸಾವಿನಿಂದ ಕುಟುಂಬಸ್ಥರು ಹಾಗೂ ಸಹ ಕಾರ್ಮಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕಾರ್ಮಿಕರ ಸುರಕ್ಷತೆಯಲ್ಲಿನ ಲೋಪಗಳಿದ್ದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೃತನ ಪೋಷಕರು ಹಾಗೂ ಸಹ ಕಾರ್ಮಿಕರು ಕಾರ್ಖಾನೆಯ ಮುಂದೆ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿದೆ. ಘಟನೆಯ ಸಂಪೂರ್ಣ ವಿವರಗಳು ಹಾಗೂ ಸಾವಿಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
