ಮಧುಗಿರಿ: ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಮುಂದಾದ ಪತಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಶ್ರಾವಂಡನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಗ್ರಾಮದ ನಿವಾಸಿಗಳಾದ ಲಕ್ಷ್ಮಣನಾಯ್ಕ್ (52) ಮತ್ತು ಅವರ ಪತ್ನಿ ನಾಗಮ್ಮ (50) ಮೃತಪಟ್ಟ ದುರ್ದೈವಿಗಳು.
ದಂಪತಿಯ ಅಡಿಕೆ ತೋಟದಲ್ಲಿ ಕೆಲಸ ಮಾಡಲು ಕೂಲಿ ಕಾರ್ಮಿಕರು ಬಂದಿದ್ದರು. ಈ ವೇಳೆ ಕಾರ್ಮಿಕರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನಾಗಮ್ಮ ಅವರು ಜಮೀನಿನಲ್ಲಿದ್ದ ಕೃಷಿ ಹೊಂಡದ ಸಮೀಪದ ಕೊಳವೆಬಾವಿಯಿಂದ ನೀರು ತರಲು ತೆರಳಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡದ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಪತ್ನಿ ಬಹಳ ಹೊತ್ತಾದರೂ ವಾಪಸ್ ಬಾರದಿದ್ದನ್ನು ಗಮನಿಸಿದ ಲಕ್ಷ್ಮಣನಾಯ್ಕ್ ಅವರು ಕೃಷಿ ಹೊಂಡದ ಬಳಿ ತೆರಳಿದಾಗ ನಾಗಮ್ಮ ನೀರಿನಲ್ಲಿ ಮುಳುಗುತ್ತಿದ್ದುದನ್ನು ಕಂಡಿದ್ದಾರೆ. ತಕ್ಷಣ ಪತ್ನಿಯನ್ನು ರಕ್ಷಿಸಲು ಹೊಂಡಕ್ಕೆ ಇಳಿದಾಗ, ಇಬ್ಬರೂ ನೀರಿನಲ್ಲಿ ಮುಳುಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಕೂಲಿ ಕಾರ್ಮಿಕರು ಹಾಗೂ ಕಿರಣ್ ಎಂಬ ಗ್ರಾಮಸ್ಥರು ಧಾವಿಸಿ ಇಬ್ಬರನ್ನೂ ನೀರಿನಿಂದ ಹೊರತೆಗೆದಿದ್ದಾರೆ. ಆದರೆ, ನಾಗಮ್ಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದೆ.
ಲಕ್ಷ್ಮಣನಾಯ್ಕ್ ಅವರು ಅಲ್ಪ ಸ್ವಲ್ಪ ಉಸಿರಾಡುತ್ತಿದ್ದ ಹಿನ್ನೆಲೆಯಲ್ಲಿ ತಕ್ಷಣ ಗೌರಿಬಿದನೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಿಂದ ಶ್ರಾವಂಡನಹಳ್ಳಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
