ಗುಬ್ಬಿ: ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರ ಬಂದು ಗ್ರಂಥಾಲಯಗಳಿಗೆ ನಿರಂತರವಾಗಿ ಭೇಟಿ ನೀಡುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಅಗತ್ಯ ಮೂಲಸೌಕರ್ಯಗಳೂ ಲಭ್ಯವಿದ್ದು, ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಡಿಪಿಐ ರಘುಚಂದ್ರ ತಿಳಿಸಿದರು.
ತಾಲ್ಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಒಸಾಟ್ ಶೈಕ್ಷಣಿಕ ಧರ್ಮದತ್ತಿ ಸಂಸ್ಥೆಯ ವತಿಯಿಂದ ನಿರ್ಮಿಸಲಾದ ಆರು ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಗಳನ್ನು ಹೊಂದಿ, ಅವುಗಳನ್ನು ಸಾಧಿಸಲು ನಿರಂತರ ಪರಿಶ್ರಮ ಪಡಬೇಕು. ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ
ಶಾಲೆಯ ಪ್ರಾಂಶುಪಾಲ ಎಚ್.ಎಂ. ಸದಾಶಿವಯ್ಯ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳು ದೊರೆಯುತ್ತವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶದಿಂದ ಒಸಾಟ್ ಸಂಸ್ಥೆಯು ನೂತನ ಶಾಲಾ ಕೊಠಡಿಗಳನ್ನು ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡಿ ಶೇ.100ರಷ್ಟು ಫಲಿತಾಂಶ ಸಾಧಿಸುವ ಮೂಲಕ ಸಂಸ್ಥೆಯ ಸೇವೆಗೆ ಸಾರ್ಥಕತೆ ತರಬೇಕು ಎಂದರು.
ಒಸಾಟ್ ಸಂಸ್ಥೆಯ ಮುಖ್ಯಸ್ಥ ಪ್ರಕಾಶ್ ನರಸಿಂಹಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಇಟ್ಟುಕೊಂಡು ಮುನ್ನಡೆಯಬೇಕು. ಮೈಸೂರಿನ ಶ್ರೀಕಂಠಯ್ಯ ಮತ್ತು ಸುಮಿತ್ರಾ ಅವರು ಒಸಾಟ್ ಸಂಸ್ಥೆಯ ಮೂಲಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ನೆರವಾಗಿದ್ದಾರೆ. ದಾನಿಗಳ ಈ ಸೇವೆ ಸಾರ್ಥಕವಾಗಬೇಕಾದರೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ದುಡಿಮೆಯ ಒಂದು ಭಾಗವನ್ನು ಸಮಾಜದ ಅಭಿವೃದ್ಧಿಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಒಸಾಟ್ ಸಂಸ್ಥೆಯ ಕಾರ್ಯ ಮಾದರಿಯಾಗಿದೆ.
ವಿದ್ಯಾರ್ಥಿಗಳು ನೂತನ ಕೊಠಡಿಗಳು ಸೇರಿದಂತೆ ಶಾಲೆಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಭಾರ ಬಿಇಒ ಮಧುಸೂದನ್, ಎಸ್ಡಿಎಂಸಿ ಅಧ್ಯಕ್ಷ ಶಿವಕುಮಾರ್ ಹಾಗೂ ಸಮಿತಿ ಸದಸ್ಯರು, ನಿವೃತ್ತ ಶಿಕ್ಷಕ ಬಿ.ಸಿ. ಶಿವಣ್ಣ, ಒಸಾಟ್ ಸಂಸ್ಥೆಯ ಮುಖ್ಯಸ್ಥ ಪ್ರಕಾಶ್, ಸಂಸ್ಥೆಯ ಸದಸ್ಯರಾದ ವೀರಣ್ಣಗೌಡ, ಮಂಜುನಾಥ್, ಕಿರಣ್ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
