ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ರೈತರ ಆರ್ಥಿಕ ಸಬಲೀಕರಣ, ಕೃಷಿ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲ ಸೌಕರ್ಯ ಬಲವರ್ಧನೆಗೆ ಆದ್ಯತೆ ನೀಡುವ ಉದ್ದೇಶದಿಂದ ತೋವಿನಕೆರೆಯ ಜೈನ ಬಸದಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24 ನೇ ಕಂತಿನ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ. ಸೋಮಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕೊರಟಗೆರೆ ಮತ್ತು ಮಧುಗಿರಿ ತಾಲೂಕಿನ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಆರ್.ಒ. ಘಟಕಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಜಿಲ್ಲೆಯ 2.36 ಲಕ್ಷ ರೈತರಿಗೆ ₹47.29 ಕೋಟಿ ನೆರವು
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ ₹6,000 ಆರ್ಥಿಕ ನೆರವನ್ನು ಮೂರು ಕಂತುಗಳಲ್ಲಿ ತಲಾ ₹2,000ರಂತೆ ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ 24ನೇ ಕಂತಿನಡಿ 2,36,473 ರೈತ ಫಲಾನುಭವಿಗಳಿಗೆ ಒಟ್ಟು ₹47.29 ಕೋಟಿ ಆರ್ಥಿಕ ನೆರವು ಬಿಡುಗಡೆಯಾಗಿದೆ ಎಂದು ಇಲಾಖೆಯ ಮಾಹಿತಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೃಷಿ ಇಲಾಖೆಯ ಅಧಿಕಾರಿಗಳು ಮಣ್ಣಿನ ಆರೋಗ್ಯ, ಮಣ್ಣಿನ ಪರೀಕ್ಷೆ, ಕೃಷಿ ಯಾಂತ್ರೀಕರಣ, ಸಮತೋಲನದ ರಸಗೊಬ್ಬರ ಬಳಕೆ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.
ಗ್ರಾಮೀಣ ಭಾಗಕ್ಕೆ ಶುದ್ಧ ಕುಡಿಯುವ ನೀರು
ಕೊರಟಗೆರೆ ಹಾಗೂ ಮಧುಗಿರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆರ್.ಒ. ಘಟಕಗಳನ್ನು ಸ್ಥಾಪಿಸುವುದರಿಂದ ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಶುದ್ಧ ಕುಡಿಯುವ ನೀರು ಲಭ್ಯವಾಗಲಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಈ ಯೋಜನೆ ಸಹಕಾರಿಯಾಗಲಿದೆ.
ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ಪರಮಪೂಜ್ಯ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಎಲೆರಾಂಪುರದ ಡಾ. ಶ್ರೀ ಹನುಮಂತನಾಥ ಮಹಾಸ್ವಾಮೀಜಿ, ಕೃಷಿ ಮತ್ತು ಬೆಸ್ಕಾಂ ಇಲಾಖೆಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ವಿವಿಧ ಇಲಾಖೆಗಳ ಪ್ರತಿನಿಧಿಗಳು, ರೈತ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
