ಮಧುಗಿರಿ: ಪಟ್ಟಣದಲ್ಲಿ ಮತ್ತೆರಡು ಹೊಸ ಬಾರ್ ಗಳನ್ನು ತೆರೆಯಲು ಅನುಮತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿ, ಹೊಸ ಬಾರ್ ಗಳಿಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಮನವಿ ಸಲ್ಲಿಸಿದರು.
ಪಟ್ಟಣದಲ್ಲಿ ಈಗಾಗಲೇ 11 ಬಾರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಮದ್ಯಪಾನದಿಂದ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆರಡು ಬಾರ್‌ಗಳನ್ನು ತೆರೆಯಲು ಅರ್ಜಿ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹೊಸ ಬಾರ್ ತೆರೆಯಲು ಉದ್ದೇಶಿಸಿರುವ ಸ್ಥಳದ ಸಮೀಪದಲ್ಲಿಯೇ ಶಾಲೆ, ತಾಲೂಕು ಆಡಳಿತ ಸೌಧ, ಉಪವಿಭಾಗಾಧಿಕಾರಿಗಳ ಕಚೇರಿ, ಇಂದಿರಾ ಕ್ಯಾಂಟೀನ್, ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣ ಮತ್ತು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಿವೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಅಬಕಾರಿ ಅಧಿಕಾರಿಗಳಿಗೆ ವಿವಿಧ ಸಂಘಟನೆಗಳ ಮುಖಂಡರು ಆಕ್ಷೇಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ನಟರಾಜ್ ಮೌರ್ಯ, ಮಧುಗಿರಿ ತಾಲೂಕಿನಲ್ಲಿ ಜನರಿಗೆ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಆದರೆ ಜನವಸತಿ ಪ್ರದೇಶ ಹಾಗೂ ಐತಿಹಾಸಿಕ ಮಹತ್ವ ಹೊಂದಿರುವ ಸ್ಥಳಗಳ ಸಮೀಪ ಮತ್ತಷ್ಟು ಬಾರ್ ಗಳನ್ನು ತೆರೆಯಲು ಮುಂದಾಗಿರುವುದು ಖಂಡನೀಯ ಎಂದರು.
ಈ ಪ್ರದೇಶದಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳ ಧಾರ್ಮಿಕ ಆಸ್ತಿಗಳು, ವಕ್ಫ್ ಆಸ್ತಿಗಳು ಹಾಗೂ ಪುರಾತನ ಪರಂಪರೆಯನ್ನು ಸಾರುವ ಕಲ್ಯಾಣಿ ಇದೆ. ಸಮೀಪದಲ್ಲಿಯೇ ಉಪವಿಭಾಗಾಧಿಕಾರಿಗಳ ಕಚೇರಿಯೂ ಇದೆ. ಇಂತಹ ಸ್ಥಳದಲ್ಲಿ ಮತ್ತೆ ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಸಿಎಲ್–2 ಪರವಾನಗಿ ಪಡೆದು ನಂತರ ಟೇಬಲ್, ಕುರ್ಚಿಗಳನ್ನು ಅಳವಡಿಸಿ ಸಿಎಲ್-7 ಮಾದರಿಯಲ್ಲಿ ಮದ್ಯಪಾನಕ್ಕೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಯುವಕರಿಗೆ ಉದ್ಯೋಗ ಕಲ್ಪಿಸುವ ಕೈಗಾರಿಕೆಗಳನ್ನು ಸ್ಥಾಪಿಸುವ ಬದಲು ಮದ್ಯದಂಗಡಿಗಳನ್ನು ಹೆಚ್ಚಿಸಲು ಮುಂದಾಗಿರುವುದು ಸರಿಯಲ್ಲ. ಹೊಸ ಬಾರ್‌ಗಳಿಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.
ಕರ್ನಾಟಕ ಕನ್ನಡಪರ ವೇದಿಕೆಯ ರಾಜ್ಯ ಉಪಾಧ್ಯಕ್ಷ ರಂಗನಾಥ್ ಮಾತನಾಡಿ, ಮಧುಗಿರಿ ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುತ್ತಿದೆ. ಏಕಶಿಲಾ ಬೆಟ್ಟದ ತಪ್ಪಲಿನಲ್ಲಿರುವ ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು. ಆದರೆ ಮದ್ಯದಂಗಡಿಗಳಿಗೆ ಅವಕಾಶ ಕಲ್ಪಿಸುವುದು ಸ್ಥಳೀಯ ಸಂಸ್ಕೃತಿ ಮತ್ತು ಸಾಮಾಜಿಕ ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈಗಾಗಲೇ ಪಟ್ಟಣದಲ್ಲಿ ಸಾಕಷ್ಟು ಬಾರ್‌ಗಳಿದ್ದು, ಮತ್ತಷ್ಟು ಮದ್ಯದಂಗಡಿಗಳ ಅಗತ್ಯವಿಲ್ಲ. ಅಬಕಾರಿ ಇಲಾಖೆ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಅಬಕಾರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಹೊಸ ಬಾರ್ ಗಳಿಗೆ ಅನುಮತಿ ನೀಡಿದರೆ ಉಗ್ರ ಹೋರಾಟ: ಡಾ. ಪಾರ್ವತಿ ಮಂಜುನಾಥ ಶರ್ಮ
ತಾಲೂಕು ನವಕರ್ನಾಟಕ ಕಾರ್ಮಿಕ ಹಾಗೂ ಇತರೆ ನಿರ್ಮಾಣ ಒಕ್ಕೂಟದ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಡಾ. ಪಾರ್ವತಿ ಮಂಜುನಾಥ ಶರ್ಮ ಮಾತನಾಡಿ, ಉತ್ತಮ ಸಮಾಜ ಮತ್ತು ಆರೋಗ್ಯಕರ ಪರಿಸರ ನಿರ್ಮಾಣವಾಗಬೇಕಾದರೆ ಮದ್ಯದಂಗಡಿಗಳ ಸಂಖ್ಯೆ ಹೆಚ್ಚಿಸುವುದಕ್ಕಿಂತ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಈಗಾಗಲೇ ಪಟ್ಟಣದಾದ್ಯಂತ ಬಾರ್‌ಗಳು ಹೆಚ್ಚಾಗಿದ್ದು, ಮದ್ಯಪಾನದ ದುಷ್ಪರಿಣಾಮಗಳಿಂದ ಕೂಲಿ ಕಾರ್ಮಿಕರ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಮತ್ತೆರಡು ಬಾರ್‌ಗಳಿಗೆ ಅನುಮತಿ ನೀಡಲು ಮುಂದಾಗಿರುವುದು ಸರಿಯಲ್ಲ. ಅಬಕಾರಿ ಇಲಾಖೆ ಜನಹಿತವನ್ನು ಗಮನದಲ್ಲಿಟ್ಟುಕೊಂಡು ಅರ್ಜಿಗಳನ್ನು ತಿರಸ್ಕರಿಸಬೇಕು. ಇಲ್ಲದಿದ್ದರೆ ಸಂಘಟನೆಯ ವತಿಯಿಂದ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಬಕಾರಿ ಉಪ ಅಧೀಕ್ಷಕ ದೀಪಕ್, ತಾಲೂಕು ಅಬಕಾರಿ ನಿರೀಕ್ಷಕಿ ಶ್ರೀಲತಾ, ಪಿಎಸ್ ಐ ಮನು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
