ಪಾವಗಡ : ಆಂಧ್ರಪ್ರದೇಶದ ಕದಿರಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ದರ್ಶನ ಮುಗಿಸಿ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಮತ್ತು ಮಗ ಮೃತಪಟ್ಟಿರುವ ದುರ್ಘಟನೆ ಭಾನುವಾರ ಸಂಜೆ ನಡೆದಿದೆ.
ತಾಲೂಕಿನ ತಿಮ್ಮಮ್ಮನಹಳ್ಳಿ ಗ್ರಾಮದ ರಾಮಾಂಜನಪ್ಪ (55) ಹಾಗೂ ಅವರ ಪುತ್ರ ಚಿನ್ನಿ ಚರಣ್ (32) ಮೃತಪಟ್ಟ ದುರ್ದೈವಿಗಳು.
ಚಿನ್ನಿ ಚರಣ್ ಅವರ ಪುತ್ರನ ತಲೆಕೂದಲು ಸಮರ್ಪಿಸುವ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಶನಿವಾರ ರಾತ್ರಿ ಕದಿರಿಗೆ ತೆರಳಿದ್ದರು. ದೇವಾಲಯದಲ್ಲಿ ಪೂಜಾ ವಿಧಿವಿಧಾನಗಳನ್ನು ಮುಗಿಸಿಕೊಂಡು ಭಾನುವಾರ ಸಂಜೆ ಟಾಟಾ ಏಸ್ ವಾಹನದಲ್ಲಿ ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು.
ಈ ಸಂದರ್ಭದಲ್ಲಿ ಕದಿರಿ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿ ಚಲಿಸುತ್ತಿದ್ದ ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಚಿನ್ನಿ ಚರಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರ ತಂದೆ ರಾಮಾಂಜನಪ್ಪ ಅವರನ್ನು ಅನಂತಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ.
ಒಂದೇ ಕುಟುಂಬದ ಇಬ್ಬರು ಸದಸ್ಯರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆ-ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತಿಮ್ಮಮ್ಮನಹಳ್ಳಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಗ್ರಾಮಸ್ಥರು ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಸೋಮವಾರ ಸಂಜೆ ಸ್ವಗ್ರಾಮ ತಿಮ್ಮಮ್ಮನಹಳ್ಳಿಯಲ್ಲಿ ನೆರವೇರಿಸಲಾಯಿತು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
