ಬೀದರ್: ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬೀದರ್ ಜಿಲ್ಲಾ ಭಾರತೀಯ ಜನತಾ ಪಕ್ಷದ (ಬಿಜೆಪಿ) ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, “ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ಹಲವು ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಒಂದಿಲ್ಲೊಂದು ರೀತಿಯಲ್ಲಿ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕುತ್ತಿದೆ” ಎಂದು ವಾಗ್ದಾಳಿ ನಡೆಸಿದರು.
“ತೈಲ ದರ ಏರಿಕೆಯಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಆದರೆ ಸರ್ಕಾರ ಶೇ 25–30ರಷ್ಟು ದರ ಹೆಚ್ಚಳ ಮಾಡಿ ಸಾರ್ವಜನಿಕರನ್ನು ಸಂಕಷ್ಟಕ್ಕೆ ತಳ್ಳಿದೆ. ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡಿ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, “ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದು ಗಾಯದ ಮೇಲೆ ಬಿಸಿ ನೀರು ಚೆಲ್ಲಿದಂತಾಗಿದೆ. ಒಂದು ಕೈಯಲ್ಲಿ ಗ್ಯಾರಂಟಿ ಹೆಸರಿನಲ್ಲಿ ಹಣ ನೀಡಿ, ಮತ್ತೊಂದು ಕೈಯಿಂದ ಜನರಿಂದ ಕಿತ್ತುಕೊಳ್ಳುತ್ತಿರುವುದು ಖಂಡನೀಯ” ಎಂದರು.
ಬಸ್ ಪ್ರಯಾಣ ಹಾಗೂ ಹಾಲಿನ ದರ ಏರಿಕೆಯು ಸಾಮಾನ್ಯ ಜನರು, ವಿದ್ಯಾರ್ಥಿಗಳು, ಮಹಿಳೆಯರು, ಕಾರ್ಮಿಕರು ಹಾಗೂ ರೈತರಿಗೆ ಭಾರೀ ಆರ್ಥಿಕ ಹೊರೆಯಾಗಿದೆ. ಆದ್ದರಿಂದ ಸರ್ಕಾರ ತಕ್ಷಣವೇ ಸಾರ್ವಜನಿಕರ ಹಿತದೃಷ್ಟಿಯಿಂದ ದರ ಏರಿಕೆ ನಿರ್ಧಾರವನ್ನು ಮರುಪರಿಶೀಲಿಸಿ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನಾಕಾರರು ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬಸ್ ನಿಲ್ದಾಣದ ಒಳಗಡೆ ಮೆರವಣಿಗೆ ನಡೆಸಿ, ಬಳಿಕ ಮುಖ್ಯದ್ವಾರದ ಎದುರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿಯ ಪ್ರಮುಖ ನಾಯಕರಾದ ಈಶ್ವರಸಿಂಗ್ ಠಾಕೂರ್, ಶಶಿ ಹೊಸಳ್ಳಿ, ಗುರುನಾಥ ಜ್ಯಾಂತೇಕರ್, ಪೀರಪ್ಪ ಔರಾದೆ, ಚನ್ನಬಸವ ಬಳತೆ, ಸಂತೋಷ ರೆಡ್ಡಿ, ದೀಪಕ ಪಾಟೀಲ, ವಿಜಯಲಕ್ಷ್ಮಿ ಕೌಟಗೆ, ಪ್ರತೀಕ್ ಚಹ್ವಾಣ, ಬಸವರಾಜ ಪವಾರ್ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
