ಕುಣಿಗಲ್: ತಾಲ್ಲೂಕು ಮಟ್ಟದ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದರೊಂದಿಗೆ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಣಿಗಲ್ ತಾಲ್ಲೂಕಿನಲ್ಲಿ ಸಮರ್ಪಕ ಮಳೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಅಭಾವದಿಂದ ಸುಮಾರು 24 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, ರೈತರಿಗೆ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಒದಗಿಸುವಂತೆ ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಈ-ಸ್ವತ್ತು ವಿತರಣೆಗೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ನಿರಂತರ ವಿದ್ಯುತ್ ಜ್ಯೋತಿ ಯೋಜನೆಯಿಂದ ಹೊರಗುಳಿದಿರುವ ಫಲಾನುಭವಿಗಳು ಕೂಡಲೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 20 ಕೋಟಿ ರೂ.ಗೂ ಅಧಿಕ ಕಂದಾಯ ಬಾಕಿ ಉಳಿದಿದ್ದು, ಅದನ್ನು ವಸೂಲಿ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು, ರಸ್ತೆ, ಚರಂಡಿ ಹಾಗೂ ಸ್ವಚ್ಛತೆಯಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್, ತಹಶೀಲ್ದಾರ್ ಕರಿಯ ನಾಯಕ್, ಪೊಲೀಸ್ ವೃತ್ತ ನಿರೀಕ್ಷಕ ಎಂ. ನಾಯಕ್, ಕೆಡಿಪಿ ಸದಸ್ಯರಾದ ಸುಮತಿ, ರೆಹಮಾನ್ ಷರೀಫ್, ಗಂಗಾಧರ್, ಎಸ್.ಆರ್. ಚಿಕ್ಕಣ್ಣ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
