ತುಮಕೂರು: ಅನಾರೋಗ್ಯದಿಂದ ಗುಣಮುಖರಾಗಿ ವಿಶ್ರಾಂತಿಯಲ್ಲಿದ್ದ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಮತ್ತೆ ತವರು ಜಿಲ್ಲೆ ತುಮಕೂರಿಗೆ ಭೇಟಿ ನೀಡಿ ದಿನವಿಡೀ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರು, ಚೇತರಿಸಿಕೊಂಡ ಬಳಿಕ ಆಡಳಿತಾತ್ಮಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಶನಿವಾರ ತುಮಕೂರು ಜಿಲ್ಲೆಗೆ ಆಗಮಿಸಿದರು.
ಮೊದಲಿಗೆ ಸಾಹೇ ಅಕಾಡೆಮಿಯ ವೈಟ್ಕೋರ್ಟ್ ಸೆರ್ಮನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಬಳಿಕ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು.
ಸಂಜೆ ನಗರದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಪೂರ್ಣಗೊಳ್ಳುವ ಹಂತದಲ್ಲಿರುವ ಎಲ್ಇಡಿ ಡಿಸ್ಪ್ಲೇ ಅಳವಡಿಕೆ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶುಭ ಅವರಿಗೆ ಕಾಮಗಾರಿಗೆ ಸಂಬಂಧಿಸಿದಂತೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ನಂತರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್ ಅವರು ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ್, ಪುರುಷೋತ್ತಮ್ ರಾವ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
