ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪಕ್ಕೆ ಸಂಬಂಧಿಸಿದಂತೆ, ಮಕ್ಕಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವಾ ಅವರು ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಕಳೆದ ವಾರವಷ್ಟೇ ನ್ಯಾಯಾಲಯವು ಕೃಪಾ ಆಳ್ವಾ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರಬಾರದು ಎಂಬ ಕಠಿಣ ಷರತ್ತುಗಳನ್ನು ವಿಧಿಸಿತ್ತು.
ನ್ಯಾಯಾಲಯದ ಆದೇಶ ಹಾಗೂ ಪೊಲೀಸರ ನೋಟಿಸ್ ಗೆ ಸ್ಪಂದಿಸಿ ಇಂದು ಸೈಬರ್ ಕ್ರೈಂ ಠಾಣೆಗೆ ಆಗಮಿಸಿದ ಕೃಪಾ ಆಳ್ವಾ ಅವರನ್ನು ಅಧಿಕಾರಿಗಳು ಸುಮಾರು ಎರಡೂವರೆ ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದರು. ಬಳಿಕ, ನವೆಂಬರ್ 11ರಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ವಿಚಾರಣೆ ಬಳಿಕ ಕೃಪಾ ಆಳ್ವಾ ಅವರ ಪರ ವಕೀಲೆ ನಿಖಿತಾ ಮಾಧ್ಯಮದವರೊಂದಿಗೆ ಮಾತನಾಡಿ, “ಕೃಪಾ ಆಳ್ವಾ ಅವರು ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಪೊಲೀಸರು ಮತ್ತೊಮ್ಮೆ ಬರುವಂತೆ ಸೂಚಿಸಿದ್ದರ ಮೇರೆಗೆ ಇಂದು ಅಧಿಕೃತವಾಗಿ ಹೇಳಿಕೆ ನೀಡಲು ಬಂದಿದ್ದಾರೆ” ಎಂದು ತಿಳಿಸಿದರು.
ವಿದೇಶ ಪ್ರವಾಸದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಕೃಪಾ ಆಳ್ವಾ ಅವರು ತಮ್ಮ ಮಗಳೊಂದಿಗೆ ವಿದೇಶಕ್ಕೆ ತೆರಳಿದ್ದು ನಿಜ. ಆದರೆ ಇದು ಸಂಪೂರ್ಣವಾಗಿ ಪೂರ್ವನಿಯೋಜಿತ ಪ್ರವಾಸವಾಗಿತ್ತೇ ಹೊರತು, ಬೇರೆ ಯಾವುದೇ ದುರುದ್ದೇಶವಿರಲಿಲ್ಲ” ಎಂದು ಸ್ಪಷ್ಟಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
