ಹಾಸನ: ಜಿಲ್ಲೆಯಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧದ ಲಂಚದ ಆರೋಪ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ತಮ್ಮ ಮೊಬೈಲ್ ನಂಬರ್ ದುರ್ಬಳಕೆ ಮಾಡಿಕೊಂಡು ನಕಲಿ ವಾಟ್ಸ್ ಆ್ಯಪ್ ಸಂದೇಶಗಳನ್ನು ಸೃಷ್ಟಿಸಿ ಹರಿಬಿಡಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ನೀಡಿದ್ದಾರೆ.
ಪ್ರಕರಣದ ಹಿನ್ನೆಲೆ:ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ, ಡಿಸಿ ಪಿಎ ಶಶಿಕಿರಣ್ ಅವರ ಹೆಸರಿನಲ್ಲಿರುವ 15 ಪುಟಗಳ ವಾಟ್ಸ್ ಆ್ಯಪ್ ಚಾಟ್ ಸ್ಕ್ರೀನ್ಶಾಟ್ಗಳನ್ನು ಬಿಡುಗಡೆ ಮಾಡಿದ್ದರು. ಕ್ರಷರ್ ಅನುಮತಿಗಾಗಿ ದೊಡ್ಡ ಮೊತ್ತದ ಲಂಚದ ಬೇಡಿಕೆ ಹಾಗೂ ಜಿಲ್ಲಾಧಿಕಾರಿ ಮುಂದುವರಿಯಲು ಸಚಿವರಿಗೆ ಹಣ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ಇದರಲ್ಲಿದ್ದವು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 336(4) ಹಾಗೂ 335ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ಚುರುಕುಗೊಳಿಸಿದ್ದು, ಪರಿಶೀಲನೆಗಾಗಿ ಶಶಿಕಿರಣ್ ಅವರ ಮೊಬೈಲ್ ಫೋನ್ ಅನ್ನು ಜಪ್ತಿ ಮಾಡಿದ್ದಾರೆ.
ತಮ್ಮ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ತರುವ ಮತ್ತು ಜಿಲ್ಲಾಡಳಿತದ ಪ್ರತಿಷ್ಠೆಗೆ ಮಸಿ ಬಳಿಯುವ ದುರುದ್ದೇಶದಿಂದಲೇ ಈ ನಕಲಿ ಚಾಟ್ ಗಳನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಸೈಬರ್ ಕ್ರೈಂ ಹಾಗೂ ಪೊಲೀಸರ ಸಮಗ್ರ ತನಿಖೆಯ ಬಳಿಕವಷ್ಟೇ ಈ ನಕಲಿ ಸಂದೇಶಗಳ ಹಿಂದಿರುವ ಅಸಲಿ ಸತ್ಯ ಹೊರಬರಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
