ಬೀದರ್ (ಹುಲಸೂರು): ವಿದ್ಯುತ್ ಪರಿವರ್ತಕದಿಂದ (ಟ್ರಾನ್ಸ್ಫಾರ್ಮರ್) ಸಿಡಿದ ಬೆಂಕಿಯ ಕಿಡಿಯಿಂದಾಗಿ ಇಬ್ಬರು ರೈತರಿಗೆ ಸೇರಿದ ನಾಲ್ಕು ಎಕರೆ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಹುಲಸೂರು ಪಟ್ಟಣದ ಹೊರವಲಯದಲ್ಲಿ ಬುಧವಾರ ನಡೆದಿದೆ.
ಪಟ್ಟಣದ ರೈತರಾದ ಧನರಾಜ್ ಚೌರೆ ಮತ್ತು ಸಚಿನ್ ಚೌರೆ ಅವರಿಗೆ ಸೇರಿದ ಜಮೀನಿನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಇಬ್ಬರೂ ರೈತರು ತಲಾ ಎರಡು ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆದಿದ್ದರು. ಕಟಾವಿಗೆ ಬಂದಿದ್ದ ಬೆಳೆ ಬೆಂಕಿಗಾಹುತಿಯಾಗಿರುವುದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ.
ವಿದ್ಯುತ್ ಪರಿವರ್ತಕದಲ್ಲಿನ ತಾಂತ್ರಿಕ ದೋಷದ ಕುರಿತು ಈಗಾಗಲೇ ಜೆಸ್ಕಾಂ (GESCOM) ಅಧಿಕಾರಿಗಳಿಗೆ ಹಲವು ಬಾರಿ ಮಾಹಿತಿ ನೀಡಲಾಗಿತ್ತು. ಆದರೆ, ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದೇ ಈ ಅವಘಡಕ್ಕೆ ಕಾರಣ ಎಂದು ರೈತ ಧನರಾಜ್ ಚೌರೆ ಗಂಭೀರವಾಗಿ ಆರೋಪಿಸಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಸಂಬಂಧಪಟ್ಟ ಇಲಾಖೆಯು ಬೆಳೆ ನಷ್ಟಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ನೊಂದ ರೈತರು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಹುಲಸೂರು ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
