ಬೀದರ್: ಔರಾದ್ ಪಟ್ಟಣದಲ್ಲಿ ಕಳೆದ ಒಂದೆರಡು ತಿಂಗಳಿನಿಂದ ತಲೆದೋರಿರುವ ತೀವ್ರ ಕುಡಿಯುವ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ, ನಾಳೆ (ನವೆಂಬರ್ 17, ಮಂಗಳವಾರ) ಔರಾದ್ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ‘ಔರಾದ್ ತಾಲೂಕು ನಾಗರಿಕ ಸಂಘರ್ಷ ಸಮಿತಿ’ ವತಿಯಿಂದ ಈ ಬಂದ್ ಗೆ ಕರೆ ನೀಡಲಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲರೂ ಸ್ವಯಂಪ್ರೇರಿತವಾಗಿ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.
ಕ್ಷೇತ್ರದ ಶಾಸಕ ಪ್ರಭು ಚೌವ್ಹಾಣ್ ಅವರು ನಾಲ್ಕು ಬಾರಿ ಶಾಸಕರಾಗಿ ಹಾಗೂ ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರೂ, ಇಲ್ಲಿಯವರೆಗೆ ಔರಾದ್ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಹಾಗೂ ಹೋರಾಟಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಪಟ್ಟಣದ ಸಾರ್ವಜನಿಕರು ಹನಿ ನೀರಿಗೂ ಪರದಾಡುವಂತಾಗಿದ್ದು, ಆಡಳಿತ ವ್ಯವಸ್ಥೆಯನ್ನು ಎಚ್ಚರಿಸಲು ಈ ಹೋರಾಟ ಹಮ್ಮಿಕೊಳ್ಳಲಾಗಿದೆ.
ನಾಳೆ ನಡೆಯಲಿರುವ ಬಂದ್ ಯಶಸ್ವಿಗೊಳಿಸಲು ಈಗಾಗಲೇ ಪಟ್ಟಣದ ಎಲ್ಲಾ ಶಾಲಾ–ಕಾಲೇಜುಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಇದರೊಂದಿಗೆ ಖಾಸಗಿ ಶಾಲಾ–ಕಾಲೇಜುಗಳು, ವ್ಯಾಪಾರಸ್ಥರು, ಬೀದಿ ಬದಿ ವ್ಯಾಪಾರಿಗಳು, ಆಟೋ ಅಸೋಸಿಯೇಷನ್ ಹಾಗೂ ಹೋಟೆಲ್ ಉದ್ಯಮಿಗಳು ಸೇರಿದಂತೆ ಪಟ್ಟಣದ ಸಮಸ್ತ ನಾಗರಿಕರು ಸ್ವಯಂಪ್ರೇರಣೆಯಿಂದ ತಮ್ಮ ವಹಿವಾಟು ಸ್ಥಗಿತಗೊಳಿಸಿ, ಕುಡಿಯುವ ನೀರಿನ ಹೋರಾಟಕ್ಕೆ ಕೈಜೋಡಿಸಬೇಕೆಂದು ನಾಗರಿಕ ಸಂಘರ್ಷ ಸಮಿತಿ ಕೋರಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
