ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಸಮೀಪದ ದಕ್ಷಿಣ ಪಿನಾಕಿನಿ ನದಿಯಲ್ಲಿ ಹೃದಯವಿದ್ರಾವಕ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹವನ್ನು ಹೊರತೆಗೆಯಲು ಮುಂದಾದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.
ಕಲ್ಕುಂಟೆ ಅಗ್ರಹಾರ ಗ್ರಾಮದ ನಿವಾಸಿ ಕವಿತಾ ಶ್ರೀನಿವಾಸ್ (35) ಮೃತ ಮಹಿಳೆ. ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಪತಿ ಮತ್ತು ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಇದರಿಂದ ತೀವ್ರ ಮನನೊಂದ ಕವಿತಾ ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನದಿಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆಯಲು ಮಾಲೂರು ಮೂಲದ ಮಂಜುನಾಥ್ ಎಂಬುವವರನ್ನು ಕರೆಸಿದ್ದರು. ಆದರೆ, ಕಾರ್ಯಾಚರಣೆ ವೇಳೆ ಮಂಜುನಾಥ್ ಕೂಡ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತದೇಹ ಹೊರತೆಗೆಯುವ ಸಂದರ್ಭದಲ್ಲಿ ಸರ್ಜಾಪುರ ಪೊಲೀಸರು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ಪೊಲೀಸರ ಈ ನಿರ್ಲಕ್ಷ್ಯವೇ ಮಂಜುನಾಥ್ ಸಾವಿಗೆ ಕಾರಣವಾಗಿದೆ ಎಂಬ ಗಂಭೀರ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಕವಿತಾ ಹಾಗೂ ಮಂಜುನಾಥ್ ಅವರ ಮೃತದೇಹಗಳಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
