ಪಾವಗಡ : ಶಿಕ್ಷಕರು ನೀಡಿದ ಶಿಕ್ಷಣ, ಸಂಸ್ಕಾರ ಹಾಗೂ ಮಾರ್ಗದರ್ಶನವನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಭಾನುವಾರ ಅದ್ಧೂರಿಯಾಗಿ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಕುಂಭ ಹೊತ್ತ ಹಿರಿಯ ವಿದ್ಯಾರ್ಥಿನಿಯರು ಹಾಗೂ ಗ್ರಾಮಸ್ಥರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮಕ್ಕಳು ಜಾಗೃತಿ ಸಂದೇಶಗಳ ನಾಮಫಲಕಗಳನ್ನು ಹಿಡಿದು ಸಾಗಿದರೆ, ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಬಳಿಕ ಶಿಕ್ಷಕರು ಹಾಗೂ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಹಿರಿಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿ ನೆನಪುಗಳನ್ನು ಮೆಲುಕು ಹಾಕಿ ಅನಿಸಿಕೆಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ರಾಷ್ಟ್ರ ಪ್ರಗತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹನುಮಂತರಾಯಪ್ಪ ಅವರು ರೈತಗೀತೆ ಹಾಡಿ ಗಮನ ಸೆಳೆದರು. ಶಿಕ್ಷಕ ಗೋಪಾಲ್ ಅವರು ಕಾರ್ಯಕ್ರಮದ ರೂಪುರೇಷೆ ಹಾಗೂ ಆಯೋಜನೆಯ ಉದ್ದೇಶವನ್ನು ವಿವರಿಸಿದರು.
ನಿವೃತ್ತ ಶಿಕ್ಷಕ ಮಲ್ಲಪ್ಪ ಪಿ.ಸಿ. ಮಾತನಾಡಿ, ಗುರುವಂದನಾ ಕಾರ್ಯಕ್ರಮ ನಮ್ಮ ಬದುಕಿನಲ್ಲಿ ಅವಿಸ್ಮರಣೀಯ ಕ್ಷಣವಾಗಿದೆ. ನಮ್ಮ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಇಂತಹ ಕಾರ್ಯಕ್ರಮಗಳು ಶಿಕ್ಷಕ ವೃತ್ತಿಗೆ ಮತ್ತಷ್ಟು ಸಂತೋಷ ಹಾಗೂ ಸಾರ್ಥಕತೆ ತಂದುಕೊಡುತ್ತವೆ ಎಂದು ತಿಳಿಸಿದರು.
ಶಿಕ್ಷಕಿ ನಾಗರತ್ನಮ್ಮ ಮಾತನಾಡಿ, ಕುರುಬರಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ವೃತ್ತಿಜೀವನದುದ್ದಕ್ಕೂ ನೀಡಿದ ಸಹಕಾರವನ್ನು ಸ್ಮರಿಸಿ, ಶಿಕ್ಷಕ ವೃತ್ತಿ ಸಾರ್ಥಕವಾಗಿದೆ ಎಂಬ ಸಂತಸ ವ್ಯಕ್ತಪಡಿಸಿದರು.
ನಿವೃತ್ತ ಶಿಕ್ಷಕ ಮುನೀರ್ ಭಾಷ ಮಾತನಾಡಿ, ತಂದೆ-ತಾಯಿ ಹಾಗೂ ಗುರುಗಳು ಸಮಾಜದಲ್ಲಿ ಅತ್ಯಂತ ಶ್ರೇಷ್ಠ ಸ್ಥಾನ ಹೊಂದಿದ್ದಾರೆ. ಅವರನ್ನು ಸದಾ ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಯುವಜನರು ದಾರಿ ತಪ್ಪದಂತೆ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಶಿಕ್ಷಕಿ ಕೆ.ವಿ. ತ್ರಿವೇಣಿ ಮಾತನಾಡಿ, ಬಡತನ ಶಾಪವಲ್ಲ; ಅದು ಬದುಕಿನಲ್ಲಿ ಸಾಧನೆಯ ದಿಕ್ಕು ತೋರಿಸುವ ಶಕ್ತಿಯಾಗಿದೆ. ಕಷ್ಟಗಳಿಗೆ ಎದೆಗುಂದದೆ ಆತ್ಮವಿಶ್ವಾಸದಿಂದ ಗುರಿಯತ್ತ ಸಾಗಿದಾಗ ಯಶಸ್ಸು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕ ರಾಮಾಂಜನೇಯ ಜಿ.ಎಲ್. ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಶಿಕ್ಷಕಿ ಭವ್ಯರಾಣಿ, ಭೂದಾನಿ ಯೋಗಾನಂದ ರೆಡ್ಡಿ, ಎಸ್ಡಿಎಂಸಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಗಣ್ಯರು ಮಾತನಾಡಿ, ಇಂತಹ ಗುರುವಂದನಾ ಕಾರ್ಯಕ್ರಮಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಇವು ಅವಿಸ್ಮರಣೀಯ ಕ್ಷಣಗಳಾಗಿ ಉಳಿಯುತ್ತವೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯ ಭೂದಾನಿಗಳ ಭಾವಚಿತ್ರಗಳನ್ನು ಕೊಡುಗೆಯಾಗಿ ನೀಡಿದರು. ತಮ್ಮ ನೆಚ್ಚಿನ ಗುರುಗಳಿಗೆ ಗೌರವ ಸಮರ್ಪಿಸಿ ಕೃತಜ್ಞತೆ ಸಲ್ಲಿಸಿದರು.
ಸ್ಥಳೀಯ ಮುಖಂಡರಾದ ಶಿವಲಿಂಗಪ್ಪ, ಆರೋಗ್ಯ ಇಲಾಖೆಯ ಗಂಗಾಧರ್, ಗಜಲಕ್ಷ್ಮಿ ಸಪ್ಲೈಯರ್ ಶಿವಪ್ಪ, ಈಶ್ವರ್, ಭಾಸ್ಕರ್, ಕೆ.ವಿ. ದೀಪಿಕಾ, ಈಶ್ವರ್ ರೆಡ್ಡಿ, ಪವನ್ ಕುಮಾರ್, ನವೀನ್ ರೆಡ್ಡಿ, ರಮೇಶ್, ಪದ್ಮಾವತಿ ಸೇರಿದಂತೆ ಹಲವು ಹಿರಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಿಂಗಣ್ಣ, ನಿವೃತ್ತ ಶಿಕ್ಷಕರ ಪುತ್ರ ಚಂದ್ರಶೇಖರ್, ವಿಜಯಲಕ್ಷ್ಮಿ, ವಿಶಾಲ್ಯ, ಲಲಿತಾ, ಶಿಕ್ಷಕರಾದ ಪಾಂಡು, ರಾಜನಾಯಕ, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
