ತುಮಕೂರು : ಸರ್ಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ (ಮಧ್ಯಾಹ್ನದ ಬಿಸಿಯೂಟ) ಯೋಜನೆಯಡಿ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ಪ್ರಸ್ತಾವನೆಯನ್ನು ಕೈಬಿಟ್ಟು, ಶಾಲಾ ಮಟ್ಟದಲ್ಲಿಯೇ ಅಡುಗೆ ವ್ಯವಸ್ಥೆ ಮುಂದುವರಿಸಬೇಕು. ಅಲ್ಪ ಗೌರವಧನಕ್ಕೆ ದುಡಿಯುತ್ತಿರುವ ಬಡ ಮಹಿಳೆಯರ ಉದ್ಯೋಗ ಕಸಿಯಬಾರದು ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ತುಮಕೂರು ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಈ ಸಂಬಂಧ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸಂಘದ ನೇತೃತ್ವದಲ್ಲಿ ಅಡುಗೆ ನೌಕರರು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಮುಖಂಡರು, ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಯಾದರೆ ಶಾಲೆಗಳಲ್ಲಿ ಹಲವು ವರ್ಷಗಳಿಂದ ಅಡುಗೆ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಮಹಿಳೆಯರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಿಸಬೇಕಾಗುತ್ತದೆ. ಈಗಾಗಲೇ ಕೇವಲ 300ರಿಂದ 650 ರೂ.ಗಳ ಅಲ್ಪ ಗೌರವಧನಕ್ಕೆ ದುಡಿಯುತ್ತಿರುವ ಬಡ, ವಿಧವಾ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಈ ಉದ್ಯೋಗವೇ ಜೀವನಾಧಾರವಾಗಿದೆ. ಇಂತಹ ಸಂದರ್ಭದಲ್ಲಿ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವುದು ಮಹಿಳೆಯರನ್ನು ಬೀದಿಪಾಲು ಮಾಡಿದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
2001ರ ಸುಪ್ರೀಂ ಕೋರ್ಟ್ ಆದೇಶದ ಬಳಿಕ ದೇಶಾದ್ಯಂತ ಬಲಗೊಂಡಿರುವ ಅಕ್ಷರ ದಾಸೋಹ ಯೋಜನೆಯು ಮಕ್ಕಳ ಪೌಷ್ಟಿಕತೆ, ಕಲಿಕಾ ಸಾಮರ್ಥ್ಯ, ಶಾಲಾ ಹಾಜರಾತಿ ಹಾಗೂ ಸಾಮಾಜಿಕ ಸಮಾನತೆ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಮಕ್ಕಳಿಗೆ ಶಾಲೆಯಲ್ಲಿಯೇ ತಾಜಾ ಮತ್ತು ಬಿಸಿಯಾದ ಆಹಾರ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿ ಸರ್ಕಾರ ಶಾಲೆಗಳಲ್ಲಿ ಅಡುಗೆ ಕೋಣೆ, ಪಾತ್ರೆ, ಗ್ಯಾಸ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿದೆ. ಹೀಗಿರುವಾಗ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆ ಅವೈಜ್ಞಾನಿಕವಾಗಿದೆ ಎಂದು ಆಕ್ಷೇಪಿಸಿದರು.
ಶಿಕ್ಷಕರು ಪಠ್ಯ ಬೋಧನೆಗೆ ಹೆಚ್ಚಿನ ಗಮನ ನೀಡಬೇಕು ಎಂಬುದು ಸಂಘದ ನಿಲುವಾಗಿದೆ. ಆದರೆ, 2012ರ ಜೂನ್ 4ರಂದು ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಸ್ವಯಂಸೇವಾ ಸಂಸ್ಥೆಗಳಿಗೆ ಅಡುಗೆ ಕೆಲಸ ವಹಿಸುವುದನ್ನು ನಿಷೇಧಿಸಲಾಗಿದೆ. ಅದೇ ವರ್ಷದ ಡಿಸೆಂಬರ್ 17ರ ಇಲಾಖೆಯ ನಡಾವಳಿಯಂತೆ ಮುಖ್ಯ ಅಡುಗೆಯವರು ಮತ್ತು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷರ ಜಂಟಿ ಖಾತೆ ವ್ಯವಸ್ಥೆಯನ್ನು ಮುಂದುವರಿಸಲು ಅವಕಾಶವಿದೆ ಎಂದು ತಿಳಿಸಿದರು.
ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವ ಅಡುಗೆ ಸಿಬ್ಬಂದಿಗೆ ಅಡುಗೆ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ವಹಿಸಬೇಕು. ಅಗತ್ಯವಿದ್ದಲ್ಲಿ ಅವರ ಕೆಲಸದ ಅವಧಿಯನ್ನು ವಿಸ್ತರಿಸಬಹುದು. ಮೊಟ್ಟೆ ಪೂರೈಕೆಯನ್ನು ಕುಕ್ಕುಟ ಮಹಾ ಮಂಡಳಿಯ ಮೂಲಕ ನೇರವಾಗಿ ಶಾಲೆಗಳಿಗೆ ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.
ಕ್ಲಸ್ಟರ್ ಕಿಚನ್ ವ್ಯವಸ್ಥೆಯ ಪ್ರಸ್ತಾವನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಶಾಲಾ ಮಟ್ಟದ ಅಡುಗೆ ವ್ಯವಸ್ಥೆಯನ್ನು ಮುಂದುವರಿಸಬೇಕು. ಅಡುಗೆ ನೌಕರರಿಗೆ ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ಅಕ್ಷರದಾಸೋಹ ಯೋಜನೆಯನ್ನು ಖಾಸಗಿ ಹಾಗೂ ಧಾರ್ಮಿಕ ಸಂಸ್ಥೆಗಳ ವಶಕ್ಕೆ ಒಪ್ಪಿಸಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್, ಪ್ರಧಾನ ಕಾರ್ಯದರ್ಶಿ ಜಿ. ಕಮಲ, ಅಕ್ಷರದಾಸೋಹ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರತ್ನ, ಮಧುಗಿರಿಯ ಶೈಲಾ, ಶಾರದಾ, ಕುಣಿಗಲ್ನ ಗಿರಿಜಮ್ಮ, ಗಜವತಿ, ಕೊರಟಗೆರೆಯ ನಾಗರತ್ನ, ನರಸಮ್ಮ, ತುಳಸಿ, ಪಾವಗಡದ ರಮ್ಯಾ ಹಾಗೂ ಪ್ರಾಂತ ರೈತ ಸಂಘದ ಬಿ. ಉಮೇಶ್ ಸೇರಿದಂತೆ ವಿವಿಧ ತಾಲ್ಲೂಕುಗಳ ಅಡುಗೆ ನೌಕರರು ಭಾಗವಹಿಸಿದ್ದರು.
ಪ್ರತಿಭಟನಾಕಾರರಿಂದ ಜಿಲ್ಲಾ ಪಂಚಾಯಿತಿ ಲೆಕ್ಕಾಧಿಕಾರಿ ನರಸಿಂಹಮೂರ್ತಿ ಹಾಗೂ ಉಪ ಕಾರ್ಯದರ್ಶಿಗಳು ಮನವಿ ಸ್ವೀಕರಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
