ತುಮಕೂರು : ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯದತ್ತ ಮುನ್ನಡೆಸುವಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು ಎಂದು ಉಪಮುಖ್ಯಮಂತ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ನಗರದ ಅಮಾನಿಕೆರೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡ) ವತಿಯಿಂದ ಆಯೋಜಿಸಿದ್ದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ-2026ರಲ್ಲಿ ಭಾಗವಹಿಸಿ, ಕಯಾಕಿಂಗ್ ಮತ್ತು ಕನೋಯಿಂಗ್ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕ ಗಳಿಸಿದ ಕ್ರೀಡಾಪಟುಗಳನ್ನು ಅಭಿನಂದಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಯಾಕಿಂಗ್ ಮತ್ತು ಕನೋಯಿಂಗ್ ಕ್ರೀಡೆಗಳ ಬಗ್ಗೆ ಈ ಹಿಂದೆ ಹೆಚ್ಚಿನ ಅರಿವು ಇರಲಿಲ್ಲ. ಜಿಲ್ಲಾಡಳಿತ, ಟೂಡ ಹಾಗೂ ಕ್ರೀಡಾ ಇಲಾಖೆಯ ಆಸಕ್ತಿಯಿಂದ ಈ ಕ್ರೀಡೆಗಳಿಗೆ ಉತ್ತೇಜನ ನೀಡುವ ಪ್ರಯತ್ನ ಮಾಡಲಾಗಿದೆ. ಮಕ್ಕಳಿಗೆ ಸೂಕ್ತ ತರಬೇತಿ ಒದಗಿಸುವ ಉದ್ದೇಶದಿಂದ ರಾಜ್ಯ ಕಯಾಕಿಂಗ್ ಮತ್ತು ಕನೋಯಿಂಗ್ ಸಂಸ್ಥೆಯ ಸಹಕಾರ ಕೋರಲಾಗಿದೆ. ಈ ಕ್ರೀಡೆಗಳ ತರಬೇತಿ ಚಟುವಟಿಕೆಗಳನ್ನು ತುಮಕೂರಿಗೆ ಸ್ಥಳಾಂತರಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಮಿನಿ ಒಲಿಂಪಿಕ್ಸ್ನ ಕಯಾಕಿಂಗ್ ಮತ್ತು ಕನೋಯಿಂಗ್ ಸ್ಪರ್ಧೆಗಳಲ್ಲಿ 14 ವರ್ಷದೊಳಗಿನ ಮಕ್ಕಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕೇವಲ ಎರಡು ಸೆಕೆಂಡ್ಗಳ ಅಂತರದಲ್ಲಿ ಚಿನ್ನದ ಪದಕ ಕೈತಪ್ಪಿದ್ದರೂ ಬೆಳ್ಳಿ ಪದಕ ಗಳಿಸಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಇನ್ನಷ್ಟು ಉತ್ತಮ ತರಬೇತಿ ನೀಡಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸಬೇಕು ಎಂದು ಹೇಳಿದರು.
ತುಮಕೂರನ್ನು ಕ್ರೀಡಾ ಚಟುವಟಿಕೆಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯ ಹಾಗೂ ತರಬೇತಿ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಬದ್ಧವಾಗಿವೆ ಎಂದು ಡಾ. ಜಿ. ಪರಮೇಶ್ವರ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಧಿಕಾರಿಗಳಾದ ಉಮೇಶ್ ಚಂದ್ರ, ಸಂತೋಷ್ ಸೇರಿದಂತೆ ಹಲವು ಕ್ರೀಡಾಪಟುಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
