ತುಮಕೂರು : ನಗರ ಪ್ರದೇಶದ ಮಕ್ಕಳಿಗೆ ಹೋಲಿಸಿದರೆ ಹಳ್ಳಿಗಾಡಿನ ಮಕ್ಕಳು ಹೆಚ್ಚು ಧೈರ್ಯಶಾಲಿಗಳು ಹಾಗೂ ಆತ್ಮವಿಶ್ವಾಸ ಹೊಂದಿರುವವರು. ಇಂಗ್ಲಿಷ್ ಭಾಷೆ ಬರುವುದಿಲ್ಲ ಎಂಬ ಕೀಳರಿಮೆ ಸೇರಿದಂತೆ ಇತರೆ ಅಡೆತಡೆಗಳನ್ನು ಮೆಟ್ಟಿನಿಂತು ಮುನ್ನಡೆದರೆ ಸಾಧನೆಯ ಶಿಖರ ಏರಲು ಸಾಧ್ಯ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.
ತುಮಕೂರು ವಿಶ್ವ ವಿದ್ಯಾಲಯದಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಇಂದು ದೇಶದಲ್ಲಿ ವೃತ್ತಿನಿರತ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳಲ್ಲಿ ಬಹುತೇಕರು ಗ್ರಾಮೀಣ ಹಿನ್ನೆಲೆ ಮತ್ತು ಕನ್ನಡ ಮಾಧ್ಯಮದಿಂದ ಬಂದವರಾಗಿದ್ದಾರೆ. ಇದನ್ನು ವಿದ್ಯಾರ್ಥಿಗಳು ಅರಿತುಕೊಂಡು ಆತ್ಮವಿಶ್ವಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ಪೋಷಕರು ಮಕ್ಕಳ ಮೇಲೆ ಇಟ್ಟಿರುವ ಮಹದಾಸೆಯನ್ನು ಈಡೇರಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.
ತುಮಕೂರು ಜಿಲ್ಲೆ 10 ತಾಲ್ಲೂಕುಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿದ್ದರೂ, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳ ಸಂಖ್ಯೆ ಕಡಿಮೆಯಿದೆ. ಪ್ರಸ್ತುತ ಜಿಲ್ಲೆಯ 18 ಮಂದಿ ಐಎಎಸ್ ಹಾಗೂ 40ಕ್ಕೂ ಹೆಚ್ಚು ಮಂದಿ ಕೆಎಎಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಬೇಕು ಎಂಬ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ.
ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಹಾಗೂ ಮಾರ್ಗದರ್ಶನವನ್ನು ಹಾಲಪ್ಪ ಪ್ರತಿಷ್ಠಾನ ಒದಗಿಸಲಿದೆ. ಇದಕ್ಕಾಗಿ ದೆಹಲಿಯಲ್ಲಿ ಪ್ರತ್ಯೇಕ ತಂಡ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಯಾಗಾರದಲ್ಲಿ ಭಾಗವಹಿಸಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ಒಬ್ಬರಾದರೂ ಐಎಎಸ್, ಐಪಿಎಸ್ ಅಥವಾ ಕೆಎಎಸ್ ಅಧಿಕಾರಿಯಾದರೆ ನಮ್ಮ ಪ್ರಯತ್ನ ಸಾರ್ಥಕವಾಗಲಿದೆ ಎಂದರು.
ತುಮಕೂರು ವಿಶ್ವ ವಿದ್ಯಾಲಯದ ಐಕ್ಯೂಎಸಿ ನಿರ್ದೇಶಕ ಹಾಗೂ ಕಲಾ ನಿಕಾಯದ ಮುಖ್ಯಸ್ಥ ಡಾ.ಕೆ.ಜಿ. ಪರಶುರಾಮ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವವಿದ್ಯಾಲಯ ವ್ಯಾಪ್ತಿಯ 95 ಪದವಿ ಕಾಲೇಜುಗಳಿಂದ ಪ್ರತಿ ವರ್ಷ ಸುಮಾರು 11 ಸಾವಿರ ವಿದ್ಯಾರ್ಥಿಗಳು ಪದವಿ ಪಡೆದು ಹೊರಬರುತ್ತಾರೆ. ಇವರಲ್ಲಿ ಕೇವಲ 2 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಅವಕಾಶ ದೊರೆಯುತ್ತದೆ.
ದೇಶದಲ್ಲಿ ಪ್ರತಿ ವರ್ಷ ಸುಮಾರು 4.50 ಕೋಟಿ ಪದವೀಧರರು ಹೊರಬರುತ್ತಿದ್ದು, ಇವರಲ್ಲಿ ಶೇ.20ಕ್ಕಿಂತ ಕಡಿಮೆ ಮಂದಿ ಉದ್ಯೋಗ ಪಡೆಯುತ್ತಿದ್ದಾರೆ. ಸರ್ಕಾರಿ ಉದ್ಯೋಗ ಪಡೆಯುವವರ ಸಂಖ್ಯೆ ಇನ್ನೂ ಕಡಿಮೆಯಿದೆ. ಉಳಿದ ವಿದ್ಯಾರ್ಥಿಗಳ ಭವಿಷ್ಯ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಗಂಭೀರ ಚಿಂತನೆ ಅಗತ್ಯವಾಗಿದೆ.
ನಾಡಿನ ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ಹಾಗೂ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವವರ ಮೂಲಕ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವ ಕಾರ್ಯವನ್ನು ಹಾಲಪ್ಪ ಪ್ರತಿಷ್ಠಾನ ಮಾಡುತ್ತಿದೆ. ಈ ಪ್ರಯತ್ನಕ್ಕೆ ಪ್ರತಿಫಲವಾಗಿ ಒಬ್ಬ ವಿದ್ಯಾರ್ಥಿಯಾದರೂ ಐಎಎಸ್, ಐಪಿಎಸ್ ಅಥವಾ ಕೆಎಎಸ್ ಅಧಿಕಾರಿಯಾದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಇನ್ಸ್ಫೈರ್ ನ ಆರ್. ಉಪೇಂದ್ರ ಶೆಟ್ಟಿ, ಕೃಷಿಕ ಸರ್ವೋದಯ ಫೌಂಡೇಶನ್‌ನ ಗೋಪಾಲಕೃಷ್ಣ ಮೂರ್ತಿ, ಇನ್‌ಸೈಟ್‌ನ ತೇಜಸ್, ಶರಣ್ಯ ಬಂಡಾರಿ ಮಠ್ ಹಾಗೂ ಪ್ರಸನ್ನ ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
