ಔರಾದ್ (ಬೀದರ್): ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ತಮ್ಮ ಮನೆ ಹಾಗೂ ನಿವೇಶನಗಳ ಆಸ್ತಿ ಹಕ್ಕಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ‘ಭೂ ಗ್ಯಾರಂಟಿ’ ಯೋಜನೆಯನ್ನು ಜಾರಿಗೆ ತಂದಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡು ಇ-ಸ್ವತ್ತು (e-Swathu) ದಾಖಲೆಗಳನ್ನು ಪಡೆಯಬೇಕು ಎಂದು ಔರಾದ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮನವಿ ಮಾಡಿದ್ದಾರೆ.
ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಗ್ರಾಮೀಣ ಭಾಗದ ಅನೇಕ ಕುಟುಂಬಗಳು ಹಲವು ವರ್ಷಗಳಿಂದ ಸ್ವಂತ ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದರೂ, ಸೂಕ್ತ ಆಸ್ತಿ ದಾಖಲೆಗಳ ಕೊರತೆಯಿಂದಾಗಿ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪಡೆಯುವಲ್ಲಿ ತೀವ್ರ ತೊಂದರೆ ಅನುಭವಿಸುತ್ತಿವೆ ಎಂದು ತಿಳಿಸಿದ್ದಾರೆ. ಇಂತಹ ತಾಂತ್ರಿಕ ಹಾಗೂ ದಾಖಲೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಭೂ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರೂ ಇದರ ಪ್ರಯೋಜನ ಪಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮನೆ ಬಾಗಿಲಿಗೆ ಬರಲಿದ್ದಾರೆ ಸಿಬ್ಬಂದಿ: ಭೂ ಗ್ಯಾರಂಟಿ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಗ್ರಾಮಠಾಣಾ ಆಸ್ತಿಗಳನ್ನು ಗುರುತಿಸಿ, ಸಮೀಕ್ಷೆ ನಡೆಸಲಾಗುತ್ತದೆ. ಬಳಿಕ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ಆಸ್ತಿ ಮಾಲೀಕರಿಗೆ ಅಧಿಕೃತ ಇ-ಸ್ವತ್ತು ದಾಖಲೆಗಳನ್ನು ವಿತರಿಸಲಾಗುತ್ತದೆ. ಇದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳ ವಿವರಗಳು ಡಿಜಿಟಲ್ ರೂಪದಲ್ಲಿ ದಾಖಲಾಗುವುದರ ಜೊತೆಗೆ, ಮಾಲೀಕರಿಗೆ ತಮ್ಮ ಆಸ್ತಿಯ ಮೇಲೆ ಕಾನೂನುಬದ್ಧ ಹಕ್ಕು ಮತ್ತು ಭದ್ರತೆ ದೊರೆಯಲಿದೆ ಎಂದು ಇಒ ಮಾಹಿತಿ ನೀಡಿದ್ದಾರೆ.
ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಯೋಜನೆಯ ಉದ್ದೇಶ, ಅರ್ಹತಾ ಮಾನದಂಡಗಳು ಹಾಗೂ ಸಲ್ಲಿಸಬೇಕಾದ ಅಗತ್ಯ ದಾಖಲೆಗಳ ಕುರಿತು ಸಮಗ್ರ ಅರಿವು ಮೂಡಿಸಲಾಗುತ್ತಿದೆ. ಈಗಾಗಲೇ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮನೆ-ಮನೆಗೆ ಭೇಟಿ ನೀಡಿ ಅರ್ಹ ಆಸ್ತಿಗಳನ್ನು ಗುರುತಿಸುವುದು, ದಾಖಲೆಗಳ ಪರಿಶೀಲನೆ ನಡೆಸುವುದು ಮತ್ತು ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಕಿರಣ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
