ಕೊರಟಗೆರೆ: ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ತಾಲ್ಲೂಕಿನ ತುಂಬಾಡಿ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ.
ವೆಂಕಟೇಶ್ವರ ಹೆಸರಿನ ಖಾಸಗಿ ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ತುಂಬಾಡಿ ಸಮೀಪಿಸುತ್ತಿದ್ದಂತೆ ಏಕಾಏಕಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದೆ. ಈ ಸಂದರ್ಭದಲ್ಲಿ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ಸನ್ನು ನಿಯಂತ್ರಿಸಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲು ನೆರವಾದರು. ಬಳಿಕ ಪ್ರಯಾಣಿಕರನ್ನು ಮತ್ತೊಂದು ಬಸ್ಸಿನ ವ್ಯವಸ್ಥೆ ಮೂಲಕ ತುಮಕೂರಿಗೆ ಕಳುಹಿಸಿಕೊಡಲಾಯಿತು.
ಬಸ್ಸು ಹಳ್ಳಕ್ಕೆ ನುಗ್ಗಲು ನಿಖರ ಕಾರಣ ತಿಳಿದುಬಂದಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಪ್ರಯಾಣಿಕರು ಹಾಗೂ ಸ್ಥಳೀಯರಲ್ಲಿ ನಿರಾಳತೆ ಮೂಡಿಸಿದೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
