ಗುಬ್ಬಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಸೇವಾ ಅಭಿಯಾನದಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗುಬ್ಬಿ ತಾಲ್ಲೂಕಿನ ಆರು ಹೋಬಳಿ ಕೇಂದ್ರಗಳಲ್ಲಿ ಹಾಗೂ ಚೇಳೂರು ಹೋಬಳಿಯ ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಅಭಿಯಾನ ಯಶಸ್ವಿಯಾಗಿ ನಡೆಯಿತು ಎಂದು ತಹಶೀಲ್ದಾರ್ ಬಿ. ಆರತಿ ತಿಳಿಸಿದರು.
ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಗುಬ್ಬಿ ನಗರದಲ್ಲಿ ಮೊದಲ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಪ್ರತಿ ಶನಿವಾರ ಹೋಬಳಿ ಕೇಂದ್ರಗಳಲ್ಲಿ ಪ್ರಜಾಸೇವಾ ಅಭಿಯಾನ ಆಯೋಜಿಸಲಾಗುತ್ತಿದೆ. ಇದೀಗ ಗ್ರಾಮ ಪಂಚಾಯಿತಿ ಮಟ್ಟಕ್ಕೂ ಅಭಿಯಾನವನ್ನು ವಿಸ್ತರಿಸಲಾಗಿದೆ ಎಂದರು.
ಸರ್ಕಾರಿ ಕಚೇರಿಗಳಿಗೆ ರೈತರು ಹಾಗೂ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಪದೇಪದೇ ಅಲೆದಾಡುವುದನ್ನು ತಪ್ಪಿಸುವುದು ಮತ್ತು ಅಧಿಕಾರಿಗಳೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಲು ಸರ್ಕಾರ ಈ ಕಾರ್ಯಕ್ರಮವನ್ನು ರೂಪಿಸಿದೆ ಎಂದು ತಿಳಿಸಿದರು.
ಗುಬ್ಬಿ ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿಯಾನ ಆರಂಭವಾದ ಬಳಿಕ ಹಲವು ಅರ್ಜಿಗಳು ಸ್ವೀಕೃತವಾಗಿವೆ. ದಾರಿ ಸಮಸ್ಯೆ, ಪೈಪ್ಲೈನ್ ಅಳವಡಿಕೆ, ಕಂದಾಯ ಗ್ರಾಮ, ಹಕ್ಕುಪತ್ರ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಸರ್ವೆ ಕಾರ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಸರ್ವೇಯರ್ಗೆ ತಹಶೀಲ್ದಾರ್ ಸೂಚಿಸಿದರು.
ಐದು ವರ್ಷ ನಾಲ್ಕು ತಿಂಗಳ ಸೇವೆಗೆ ತಹಶೀಲ್ದಾರ್ ಆರತಿಗೆ ಪ್ರಶಂಸೆ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ವಾತ್ಸಲ ಮಾತನಾಡಿ, ತಹಶೀಲ್ದಾರ್ ಬಿ. ಆರತಿ ಅವರು ಪದೋನ್ನತಿ ಹೊಂದಿರುವುದು ಸಂತಸದ ವಿಚಾರ. ಗುಬ್ಬಿ ತಾಲ್ಲೂಕಿನಲ್ಲಿ ಐದು ವರ್ಷ ನಾಲ್ಕು ತಿಂಗಳು ಯಶಸ್ವಿಯಾಗಿ ಸೇವೆ ಸಲ್ಲಿಸುವ ಮೂಲಕ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ತಹಶೀಲ್ದಾರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದರು.
ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಹಲವು ಪ್ರಶಸ್ತಿ ಮತ್ತು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಚುನಾವಣಾ ಆಯೋಗದ ಕಾರ್ಯದಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರಿಂದ ಪ್ರಶಂಸನಾ ಪತ್ರ ಹಾಗೂ ಪ್ರಶಸ್ತಿ ಪಡೆದಿದ್ದಾರೆ. ಪೌತಿ, ಕಂದಾಯ ಗ್ರಾಮ, ದರಖಾಸ್ತು ಪೋಡಿ ಸೇರಿದಂತೆ ವಿವಿಧ ಕಂದಾಯ ಯೋಜನೆಗಳ ಅನುಷ್ಠಾನದಲ್ಲಿಯೂ ಉತ್ತಮ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ಹಾಗೂ ತುಮಕೂರಿನಲ್ಲಿ ನಡೆದ ಸಮಾವೇಶಗಳಲ್ಲಿ ರಾಜ್ಯ ಸರ್ಕಾರದಿಂದ ಪ್ರಶಂಸನಾ ಪತ್ರ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿರುವ ಆರತಿ ಅವರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ಮೂಲಕ ಉತ್ತಮ ಹೆಸರು ಗಳಿಸಿದ್ದಾರೆ ಎಂದು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಎಡಿ ರಂಗನಾಥ್, ಎಇಇ ನಾಗೇಂದ್ರಪ್ಪ, ಕೃಷಿ ಇಲಾಖೆ ಅಧಿಕಾರಿ ಜಗನ್ನಾಥ್, ಉಪತಹಶೀಲ್ದಾರ್ ಆರ್.ಜಿ. ನಾಗಭೂಷಣ್, ಕಂದಾಯ ನಿರೀಕ್ಷಕ ಪ್ರಸನ್ನ, ಗ್ರಾಮ ಆಡಳಿತಾಧಿಕಾರಿಗಳಾದ ಸುಮತಿ, ಮಹೇಶ್, ಭಾನುಪ್ರಕಾಶ್, ಶಿವಕುಮಾರ್, ಪಿಡಿಒಗಳಾದ ಯುವರಾಜ್, ರೇಖಾ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
