ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿಗಳು ಸಂಕುಚಿತ ಮನೋಭಾವನೆ ತೊರೆದು ವಿಶಾಲ ದೃಷ್ಟಿಕೋನ ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದು ಕುಟುಂಬ, ಗ್ರಾಮ ಹಾಗೂ ತಾಲ್ಲೂಕಿಗೆ ಕೀರ್ತಿ ತರುವ ಮೂಲಕ ಸಮಾಜ ಸೇವೆಯ ಗುಣ ಬೆಳೆಸಿಕೊಳ್ಳಬೇಕು. ಯಾವುದೇ ಕೆಲಸವನ್ನು ಕೀಳಾಗಿ ಕಾಣದೆ ಗೌರವದಿಂದ ನಿರ್ವಹಿಸಬೇಕು ಎಂದು ಶಾಸಕ ಸಿ.ಬಿ. ಸುರೇಶ್ಬಾಬು ತಿಳಿಸಿದರು.
ಪಟ್ಟಣದ ತೀನಂಶ್ರೀ ಭವನದಲ್ಲಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಜ್ಞಾನಕಲ್ಪ ಉಚಿತ ಸಿಇಟಿ, ನೀಟ್ ಹಾಗೂ ಜೆಇಇ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದು ಉತ್ತಮ ಅಂಕಗಳೊಂದಿಗೆ ಸರ್ಕಾರಿ ಕೋಟಾದಡಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ತಾಲ್ಲೂಕಿನ ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳ ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿಇಟಿ ತರಬೇತಿಯ ಮೂಲಕ ಒಟ್ಟು 160 ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಸರ್ಕಾರಿ ಕೋಟಾದಡಿ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪಡೆದಿದ್ದಾರೆ. ವಿದ್ಯಾರ್ಥಿಗಳ ಇಚ್ಛೆಯಂತೆ 138 ಮಂದಿಗೆ ಲ್ಯಾಪ್ ಟಾಪ್, ನಾಲ್ವರಿಗೆ ಶೈಕ್ಷಣಿಕ ಶುಲ್ಕ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇವುಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷತಾ ಕಿಟ್ಗಳನ್ನು ವಿತರಿಸಲಾಗುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಉತ್ತಮ ಆರೋಗ್ಯದ ಮಹತ್ವ ತಿಳಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸುವ ಕಾರ್ಯವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರಿನ ಸಹಾಯಕ ಪ್ರಾಧ್ಯಾಪಕಿ ಪ್ರೊ. ದಿವ್ಯಮೂರ್ತಿ ಮಾತನಾಡಿ, ಕಳೆದ 14 ವರ್ಷಗಳಿಂದ ಉಚಿತ ತರಬೇತಿ ನೀಡುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವ ಶಾಸಕರ ಕಾರ್ಯ ಶ್ಲಾಘನೀಯ. ರ್ಯಾಂಕ್ ಟು ರೈಟ್ ಚಾಯ್ಸ್ ಕಾರ್ಯಕ್ರಮದ ಮೂಲಕ ಸುಮಾರು 250 ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿಗೆ ಉತ್ತಮ ದಾರಿ ಕಂಡುಕೊಂಡಿದ್ದಾರೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಬೆಳೆಸಿಕೊಂಡು ಸಾಧನೆ ಮಾಡಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಪ್ರೊ. ಕೃಷ್ಣಚೈತನ್ಯ ಮಾತನಾಡಿ, ಗುಣಮಟ್ಟದ ತರಬೇತಿ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ದೊರೆತ ಅವಕಾಶವನ್ನು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು ಎಂದರು.
ಕೆಂಕೆರೆಯ ಕೆಪಿಎಸ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಜಿ. ಕೃಷ್ಣಮೂರ್ತಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಉಚಿತ ಊಟ, ವಸತಿ ಹಾಗೂ ಮೂಲಸೌಕರ್ಯಗಳೊಂದಿಗೆ ಗುಣಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ಸಿಇಟಿ ತರಬೇತಿ ನೀಡುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತರಬೇತಿ ಪಡೆದು ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾದ ವೈದಿಕಾ, ಮನೋಜ್, ಯೋಗಶ್ರೀ ಹಾಗೂ ಲಕ್ಷ್ಮೀಕಾಂತ್ ತಮ್ಮ ಅನುಭವ ಹಂಚಿಕೊಂಡು, ಈ ತರಬೇತಿಯಿಂದ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಮೂಡಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ದೊರೆತಿದೆ ಎಂದರು.
ಸಿಇಟಿ ತರಬೇತಿ ಸಮಿತಿ ಅಧ್ಯಕ್ಷ ನಾಗರಾಜು ಮಾತನಾಡಿ, 2025 ರಲ್ಲಿ 383 ಹಾಗೂ 2026ರಲ್ಲಿ 493 ವಿದ್ಯಾರ್ಥಿಗಳು ಜ್ಞಾನಕಲ್ಪ ಉಚಿತ ಸಿಇಟಿ, ನೀಟ್ ಮತ್ತು ಜೆಇಇ ತರಬೇತಿ ಪಡೆದಿದ್ದಾರೆ. ಉತ್ತಮ ಅಂಕಗಳೊಂದಿಗೆ ಸರ್ಕಾರಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಅವರ ಬೇಡಿಕೆಯಂತೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕೋಡಿಹಳ್ಳಿ ರಮೇಶ್, ಕಂದಿಕೆರೆ ವಿಜಯಲಕ್ಷ್ಮಿ, ನಿಕಟಪೂರ್ವ ಅಧ್ಯಕ್ಷ ಸಾ.ಚಿ. ನಾಗೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಇಒ ಕಾಂತರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ್ ಕುಮಾರ್, ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಎಸ್. ರವಿಕುಮಾರ್, ಮಾಜಿ ಪುರಸಭಾ ಅಧ್ಯಕ್ಷ ಎಂ.ಎನ್. ಸುರೇಶ್, ನಿವೃತ್ತ ತಹಶೀಲ್ದಾರ್ ಲಕ್ಷ್ಮಣಪ್ಪ, ಮಾಜಿ ಪುರಸಭಾ ಉಪಾಧ್ಯಕ್ಷ ರಾಜಶೇಖರ್ ಸೇರಿದಂತೆ ಟ್ರಸ್ಟ್ ಹಾಗೂ ಉಚಿತ ಸಿಇಟಿ ತರಬೇತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
