ತಿಪಟೂರು: ತಾಲ್ಲೂಕಿನ ರಂಗಾಪುರ–ಹೊಸಹಳ್ಳಿ ಸಮೀಪದ ರಾಯರ ತೋಟದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ಅದ್ಧೂರಿ ಕಾರ್ತೀಕ ದೀಪೋತ್ಸವ ಮಹೋತ್ಸವ ನಡೆಯಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದೇವಸ್ಥಾನದ ಧರ್ಮಾಧಿಕಾರಿ ಮಂಜುನಾಥ್, ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ, ಬೆಂಗಳೂರು ಗಾಣಿಗರ ಮಹಾಸಂಸ್ಥಾನದ ತೈಲೇಶ್ವರ ಮಠದ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಹಾಗೂ ದಸರೀಘಟ್ಟ ಆದಿಚುಂಚನಗಿರಿ ಶಾಖಾಮಠದ ಶ್ರೀ ಸತ್ ಕೀರ್ತಿನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಅಂದು ಬೆಳಿಗ್ಗೆ ಶ್ರೀ ಆಂಜನೇಯಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ ನಡೆಯಲಿದ್ದು, ಸಂಜೆ 3.30ಕ್ಕೆ ಗಂಗಾಸ್ನಾನ, 4.30ಕ್ಕೆ 101 ಎಡೆ ಹರಿಸೇವೆ ಹಾಗೂ ಸಂಜೆ 6.30ಕ್ಕೆ ದೀಪಾರಾಧನೆ ನೆರವೇರಲಿದೆ.
ರಾತ್ರಿ 7 ಗಂಟೆಗೆ ರಂಗಾಪುರದ ರಾಜಬೀದಿಗಳಲ್ಲಿ ವಿವಿಧ ಜಾನಪದ ಹಾಗೂ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಶ್ರೀ ಆಂಜನೇಯಸ್ವಾಮಿ ಮತ್ತು ಕೆರೆಗೋಡಿ ದ್ಯಾವಮ್ಮ ದೇವಿಯ ಭವ್ಯ ಉತ್ಸವ ಮೆರವಣಿಗೆ ನಡೆಯಲಿದೆ. ರಾತ್ರಿ 9 ಗಂಟೆಗೆ ಕೆಂಡದ ಸೇವೆ, 9.30ಕ್ಕೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಇದರೊಂದಿಗೆ ಆಕರ್ಷಕ ಮದ್ದಿನ ಪ್ರದರ್ಶನ ಹಾಗೂ ಸಂಗೀತ ಸಂಜೆ ಕಾರ್ಯಕ್ರಮವೂ ನಡೆಯಲಿದೆ.
ಕಾರ್ತೀಕ ದೀಪೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ದೇವಾಲಯದ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳು ಹಾಗೂ ರಂಗಾಪುರ, ಹೊಸಹಳ್ಳಿ ಮತ್ತು ಕೆರೆಗೋಡಿ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
