ತುಮಕೂರು : ಜಿಲ್ಲೆಯಲ್ಲಿ ಬೆಳೆ ಹಾನಿಗೊಳಗಾದ ಅರ್ಹ ರೈತರಿಗೆ ಬೆಳೆ ಪರಿಹಾರ ವಿತರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಒಟ್ಟು 1,83,090 ರೈತರಿಗೆ ₹45.77 ಕೋಟಿ ಪರಿಹಾರ ವಿತರಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
2026-27ನೇ ಸಾಲಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಆಗಸ್ಟ್ 27ರಂದು ತುಮಕೂರು ಜಿಲ್ಲೆಯ ಎಲ್ಲಾ 10 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿತ್ತು. ಮಳೆ ಕೊರತೆಯಿಂದ ವಿವಿಧ ಬೆಳೆಗಳು ಹಾನಿಗೊಳಗಾದ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಬೆಳೆ ಹಾನಿಯ ಪ್ರಮಾಣವನ್ನು ದೃಢಪಡಿಸಿದ್ದರು.
ಅಧಿಕಾರಿಗಳ ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 1,92,128.18 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವುದು ಗುರುತಿಸಲಾಗಿದೆ. ಎಸ್ಡಿಆರ್ಎಫ್ ಮಾರ್ಗಸೂಚಿಗಳ ಅನ್ವಯ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ರಾಜ್ಯ ಸರ್ಕಾರವು ಅರ್ಹ ರೈತರಿಗೆ ಪ್ರತಿ ಹೆಕ್ಟೇರ್ಗೆ ₹2,500ರಂತೆ ಬೆಳೆ ಪರಿಹಾರ ಘೋಷಿಸಿದ್ದು, ಅದರಂತೆ 1,03,851.26 ಹೆಕ್ಟೇರ್ ಬಿತ್ತನೆ ಪ್ರದೇಶಕ್ಕೆ ಸಂಬಂಧಿಸಿದಂತೆ 1,83,090 ಅರ್ಹ ರೈತರಿಗೆ ಒಟ್ಟು ₹45.77 ಕೋಟಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ರೈತರಿಗೆ ಪರಿಹಾರ ಮೊತ್ತವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಸಕಾಲದಲ್ಲಿ ಪರಿಹಾರ ತಲುಪಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
