ಕೊರಟಗೆರೆ : ಕೊರಟಗೆರೆ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ (TAPCMS) ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಈ ಹಿಂದಿನ ಅಧ್ಯಕ್ಷರಾಗಿದ್ದ ಈಶ್ವರಪ್ಪ ಅವರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿನಯ್ ಕುಮಾರ್ ಅವರನ್ನು ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಯಾವುದೇ ಸ್ಪರ್ಧೆ ಇಲ್ಲದೆ ಆಯ್ಕೆಯಾಗಿರುವ ಅವರು ಸಂಘದ ನೂತನ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ರೈತರ ಹಿತಾಸಕ್ತಿಗೆ ಆದ್ಯತೆ:
ನೂತನ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ, ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಸಂಘದ ನಿರ್ದೇಶಕರು, ಸದಸ್ಯರು ಹಾಗೂ ರೈತ ಬಾಂಧವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತೇನೆ ಎಂದರು.
ಕೊರಟಗೆರೆ ತಾಲೂಕಿನ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸುವುದು, ಮಾರಾಟ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಹಾಗೂ ಸಹಕಾರ ಸಂಘವನ್ನು ಮತ್ತಷ್ಟು ಬಲಪಡಿಸುವುದು ನನ್ನ ಪ್ರಮುಖ ಆದ್ಯತೆಗಳಾಗಿವೆ. ರೈತರು, ಸದಸ್ಯರು ಮತ್ತು ನಿರ್ದೇಶಕರ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಕೃಷಿಕರ ಹಿತಾಸಕ್ತಿ ರಕ್ಷಣೆ, ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಹಾಗೂ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ನೂತನ ಅಧ್ಯಕ್ಷರು ಕೈಗೊಳ್ಳಲಿರುವ ಕ್ರಮಗಳ ಕುರಿತು ರೈತರು ಮತ್ತು ಸಹಕಾರ ಕ್ಷೇತ್ರದ ಮುಖಂಡರಲ್ಲಿ ನಿರೀಕ್ಷೆ ಮೂಡಿದೆ.
ನೂತನ ಅಧ್ಯಕ್ಷ ವಿನಯ್ ಕುಮಾರ್ ಅವರಿಗೆ ಸಂಘದ ನಿರ್ದೇಶಕರು, ಅಭಿಮಾನಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಭಾರ ಅಧ್ಯಕ್ಷೆ ಭಾಗ್ಯಮ್ಮ ಮಹೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ನಿರ್ದೇಶಕರಾದ ಎಸ್. ಹನುಮಾನ್, ರಾಜಶೇಖರಯ್ಯ, ಜಯರಾಮು, ಜಿ.ಕೆ. ಕುಮಾರ್, ಕೆ.ವಿ. ಮಂಜುನಾಥ್, ಕೆ.ವಿ. ಪುರುಷೋತ್ತಮ್, ಸಿದ್ದಲಿಂಗಪ್ಪ, ಹನುಮಂತರಾಯ, ಕೆ. ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ್, ಕೆ.ಆರ್. ಓಬಳರಾಜು, ಎಲ್. ರಾಜಣ್ಣ, ಕಾರ್ ಮಹೇಶ್, ನಟೇಶ್, ಕೆ.ಬಿ. ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
