ಮಧುಗಿರಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ವತಿಯಿಂದ ಪಟ್ಟಣದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಂಗವಾಗಿ ಪಟ್ಟಣದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಹಲವು ವೃದ್ಧಾಶ್ರಮಗಳಿಗೆ ಭೇಟಿ ನೀಡಿ ವೃದ್ಧರಿಗೆ ದಿನಸಿ ಸಾಮಗ್ರಿಗಳು ಹಾಗೂ ಹಣ್ಣುಗಳನ್ನು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್ ಮಾತನಾಡಿ, ಚತುರ್ವಿಧ ದಾನಗಳ ಮೂಲಕ ನಾಡಿನಾದ್ಯಂತ ಬಡವರ ಏಳಿಗೆ, ಸಾಮಾಜಿಕ ಅಭಿವೃದ್ಧಿ ಹಾಗೂ ಧಾರ್ಮಿಕ ಕ್ಷೇತ್ರದ ಉಳಿವಿಗಾಗಿ ಶ್ರಮಿಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ನಮಗೆಲ್ಲ ಸಂತೋಷದ ದಿನವಾಗಿದೆ. ಶ್ರೀ ಮಂಜುನಾಥ ಸ್ವಾಮಿಯು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕರುಣಿಸಿ, ಇನ್ನಷ್ಟು ವರ್ಷಗಳ ಕಾಲ ಬಡವರು ಹಾಗೂ ಸಮಾಜದ ಹಿಂದುಳಿದ ವರ್ಗಗಳ ಸೇವೆ ಮಾಡುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದು, ವೃದ್ಧರು ಹಾಗೂ ಅಶಕ್ತರಿಗೆ ನೆರವು ನೀಡುವ ಇಂತಹ ಕಾರ್ಯಕ್ರಮಗಳು ಮಾನವೀಯ ಮೌಲ್ಯಗಳನ್ನು ಬೆಳೆಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಸಂಜೀವೇಗೌಡ, ಲತಾ ಪ್ರದೀಪ್, ಲಿಂಗಾರೆಡ್ಡಿ, ಗುಟ್ಟೆ ವೀರೇಂದ್ರ, ಮಧುಗಿರಿ–1 ಮತ್ತು ಮಧುಗಿರಿ–2 ಯೋಜನಾ ಕಚೇರಿಗಳ ಯೋಜನಾಧಿಕಾರಿಗಳಾದ ಸಂತೋಷ್ ಕುಮಾರ್ ಹಾಗೂ ಶಶಿಧರ್ ಸೇರಿದಂತೆ ಯೋಜನಾ ಕಚೇರಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
