ಪಾವಗಡ : ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಹಾಲಿ ಶಾಸಕ ಎಚ್.ವಿ. ವೆಂಕಟೇಶ್ ಮತ್ತು ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ನಡುವೆ ರಾಜಕೀಯ ವಾಕ್ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ತಮ್ಮ ಶಾಸಕತ್ವದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಹಾಗೂ ಹಾಲಿ ಶಾಸಕರ ಆಡಳಿತಾವಧಿಯ ಸಾಧನೆಗಳ ಕುರಿತು ಬಹಿರಂಗ ಚರ್ಚೆಗೆ ಸಿದ್ಧವಿರುವುದಾಗಿ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಸವಾಲು ಹಾಕಿದರು.
ತಾಲೂಕಿನ ವೈ.ಎನ್. ಹೊಸಕೋಟೆಯ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಜೆಡಿಎಸ್ ಹೋಬಳಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ತಮ್ಮ ಶಾಸಕತ್ವದ ಅವಧಿಯಲ್ಲಿ ವಸತಿ ಶಾಲೆಗಳ ಸ್ಥಾಪನೆ, ಕೆಎಸ್ ಆರ್ ಟಿಸಿ ಡಿಪೋ, ಗ್ರಾಮೀಣ ರಸ್ತೆಗಳು, ಚರಂಡಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಅವಧಿಯ ಸಾಧನೆ ಮತ್ತು ಹಾಲಿ ಶಾಸಕರ ಕಾರ್ಯವೈಖರಿಯನ್ನು ಸಾರ್ವಜನಿಕ ವೇದಿಕೆಯಲ್ಲಿ ಚರ್ಚಿಸಲು ಸಿದ್ಧ ಎಂದು ತಿಳಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ. ಅಂಜಿನಪ್ಪ ಮಾತನಾಡಿ, ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವ ಭರವಸೆ ಇನ್ನೂ ಈಡೇರಿಲ್ಲ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ರೈತರ ಪರಿಹಾರದ ವಿಚಾರದಲ್ಲಿ ಸರ್ಕಾರ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ರಾಜ್ಯ ಉಪಾಧ್ಯಕ್ಷ ತಿಮ್ಮಾರೆಡ್ಡಿ ಮಾತನಾಡಿ, ಪಾವಗಡ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದ್ದರೆ ಶಾಸಕರು ಅವುಗಳನ್ನು ಜನರ ಮುಂದಿಡಲಿ. ಜೆಡಿಎಸ್ ಆಡಳಿತಾವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಹೊರತುಪಡಿಸಿ ಕಾಂಗ್ರೆಸ್ ಸರ್ಕಾರದಿಂದ ಮಹತ್ವದ ಸಾಧನೆಯಾಗಿಲ್ಲ ಎಂದು ಟೀಕಿಸಿದರು.
ಮಹಾ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಮಾತನಾಡಿ, ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಗಳ ನೀರು ಕೆರೆಗಳಿಗೆ ಯಾವಾಗ ಹರಿಯಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಗ್ರಾಮೀಣ ಪ್ರದೇಶಗಳಿಗೆ ತುಂಗಭದ್ರಾ ನೀರು ಸಮರ್ಪಕವಾಗಿ ತಲುಪುತ್ತಿಲ್ಲ. ತುಂಗಭದ್ರಾ ನೀರನ್ನು ಪಾವಗಡಕ್ಕೆ ತರುವಲ್ಲಿ ಮಾಜಿ ಶಾಸಕ ತಿಮ್ಮರಾಯಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ ಎಂದರು.
ಶಾಸಕರ ನಡವಳಿಕೆಗೆ ಜೆಡಿಎಸ್ ಮುಖಂಡರ ಆಕ್ಷೇಪ
ರಾಜಶೇಖರಪ್ಪ ಮಾತನಾಡಿ, ಶಾಸಕ ಎಚ್.ವಿ. ವೆಂಕಟೇಶ್ ಅವರು ಜೆಡಿಎಸ್ ಮುಖಂಡರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ರಾಜಕೀಯದಲ್ಲಿ ಹಿರಿಯರಿಗೆ ಗೌರವ ನೀಡಬೇಕು. ಜೆಡಿಎಸ್ ಮುಖಂಡರನ್ನು ಏಕವಚನದಲ್ಲಿ ಸಂಬೋಧಿಸುವುದು ಸಮಂಜಸವಲ್ಲ ಎಂದು ಹೇಳಿದರು.
ಶಾಸಕರ ವಿರುದ್ಧ ಅಕ್ರಮ ಗಣಿಗಾರಿಕೆ, ಒತ್ತುವರಿ ಹಾಗೂ ರೈತರಿಗೆ ಅನ್ಯಾಯ ಮಾಡಿದ ಆರೋಪಗಳನ್ನು ಪ್ರಸ್ತಾಪಿಸಿದ ಅವರು, ವೈಯಕ್ತಿಕ ಆರೋಪ ಮಾಡುವ ಮೊದಲು ತಮ್ಮ ನಡೆ-ನುಡಿಗಳ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.
ಕೋಟಗುಡ್ಡ ಅಂಜಪ್ಪ ಮಾತನಾಡಿ, ತಮ್ಮ ಬಗ್ಗೆ ವೈಯಕ್ತಿಕವಾಗಿ ಮಾತನಾಡಲು ಶಾಸಕರಿಗೆ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದರು. ಕೆ.ಟಿ.ಹಳ್ಳಿ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕರ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಶ್ನಿಸಿದ್ದೇನೆ ಹೊರತು ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಿಲ್ಲ. ತಮ್ಮ ವಿರುದ್ಧ ಸಾರ್ವಜನಿಕವಾಗಿ ಬಳಸಿದ ಆಕ್ಷೇಪಾರ್ಹ ಮಾತುಗಳು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆಗೆ ಬನ್ನಿ, ನಮ್ಮ ಶಕ್ತಿಯನ್ನು ತೋರಿಸುತ್ತೇವೆ ಎಂದು ಸವಾಲು ಹಾಕಿದರು.
ಮತ ನೀಡಿದ್ದಕ್ಕೆ ಇಂದು ಪಶ್ಚಾತ್ತಾಪ: ನಿವೃತ್ತ ಯೋಧ ಹನುಮಪ್ಪ
ನಿವೃತ್ತ ಸಿಆರ್ಪಿಎಫ್ ಯೋಧ ಹನುಮಪ್ಪ ಮಾತನಾಡಿ, ದೇಶದ ರಕ್ಷಣೆಗಾಗಿ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ತಾನು, ತಮ್ಮ ಬೋವಿ ಸಮುದಾಯದವರೇ ಎಂಬ ನಂಬಿಕೆಯಿಂದ ಶಾಸಕ ಎಚ್.ವಿ. ವೆಂಕಟೇಶ್ ಅವರಿಗೆ ಮತ ನೀಡಿದ್ದೆ. ಆದರೆ ಶಾಸಕರ ಇತ್ತೀಚಿನ ನಡವಳಿಕೆಯಿಂದ ಬೇಸರವಾಗಿದ್ದು, ಮತ ನೀಡಿದ ನಿರ್ಧಾರದ ಬಗ್ಗೆ ಇಂದು ಪಶ್ಚಾತ್ತಾಪವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಮುಂಬರುವ ಚುನಾವಣೆಗಳಲ್ಲಿ ಜನರು ತಮ್ಮ ಅಭಿಪ್ರಾಯವನ್ನು ಮತದಾನದ ಮೂಲಕ ವ್ಯಕ್ತಪಡಿಸಬೇಕು ಎಂದು ಹೇಳಿದರು.
ಕಾರ್ಯಕರ್ತರ ಸಮಾವೇಶದಲ್ಲಿ ಮುಖಂಡರ ಭಾಗಿ
ಸಮಾವೇಶದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎನ್.ಎ. ಈರಣ್ಣ, ಭೀಮನಕುಂಟೆ ಸತ್ಯಪ್ಪ, ರಾಯಚೆರ್ಲಪ್ಪ, ಬಲರಾಮ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ತುಮುಲ್ ನಿರ್ದೇಶಕ ಚನ್ನಮಲ್ಲಪ್ಪ, ಕೊತ್ತೂರು ನಾಗೇಶ್, ಲೋಕೇಶ್ ಪಾಳೇಗಾರ, ಬಲರಾಮರೆಡ್ಡಿ, ಅಕ್ಲಪ್ಪ ನಾಯ್ಡು, ಆಂಜಿನೇಯಲು, ಈರಣ್ಣ, ಅಂಬಿಕಾ ರಮೇಶ್, ನಲ್ಲಪ್ಪ, ಸುರೇಂದ್ರ, ಗಂಗಾಧರ್ ನಾಯ್ಡು ಸೇರಿದಂತೆ ಹಲವು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
