ತುಮಕೂರು: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ತುಮಕೂರಿನ ತಂಗನಹಳ್ಳಿ ಅನ್ನಪೂರ್ಣೇಶ್ವರಿ ಮಠದಲ್ಲಿ ಆಯೋಜಿಸಲಾಗಿದ್ದ ‘ಯುವ ಸಂವಾದ — ಸಂವಿಧಾನ ದಿವಸ’ ಕಾರ್ಯಕ್ರಮದಲ್ಲಿ ಯುವ ವಾಗ್ಮಿ ತೇಜಸ್ ಹೆಚ್.ಎನ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಿದ್ದ ಕರ್ನಾಟಕದ ವಿವಿಧ ಜಿಲ್ಲೆಗಳ ಎನ್ಎಸ್ಎಸ್ ಸ್ವಯಂಸೇವಕರೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ತೇಜಸ್ ಹೆಚ್.ಎನ್. ಅವರು, ಭಾರತದ ಸಂವಿಧಾನದ ಮಹತ್ವ, ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಹಕ್ಕುಗಳು ಮತ್ತು ಅವಕಾಶಗಳು, ಸಾಂವಿಧಾನಿಕ ಮೌಲ್ಯಗಳು, ಪ್ರಜಾಸತ್ತಾತ್ಮಕ ಜವಾಬ್ದಾರಿಗಳು ಹಾಗೂ ವಿಕಸಿತ ಭಾರತ 2047ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ಸಂವಿಧಾನವು ಕೇವಲ ಆಡಳಿತ ನಡೆಸುವ ಕಾನೂನುಗಳ ಸಂಕಲನವಲ್ಲ; ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ಸಮಾನ ಅವಕಾಶ, ಸ್ವಾತಂತ್ರ್ಯ ಮತ್ತು ಗೌರವಯುತ ಬದುಕನ್ನು ಕಲ್ಪಿಸುವ ಶಕ್ತಿಯುತ ಮಾರ್ಗದರ್ಶಿಯಾಗಿದೆ ಎಂದು ತಿಳಿಸಿದರು. ಯುವಜನತೆ ಸಂವಿಧಾನದ ಆಶಯಗಳನ್ನು ಅರಿತುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ವಿದ್ಯೋದಯ ಕಾನೂನು ಕಾಲೇಜಿನ ಪ್ರಾಧ್ಯಾಪಕರಾದ ಮಂಜುನಾಥ್ ಅವರು ಭಾರತೀಯ ಸಂವಿಧಾನದ ವಿವಿಧ ಆಯಾಮಗಳು ಹಾಗೂ ಅದರ ಮಹತ್ವದ ಕುರಿತು ಸಮಗ್ರ ಮಾಹಿತಿಯನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ವಿದ್ಯೋದಯ ಕಾನೂನು ಕಾಲೇಜಿನ ಪ್ರಾಧ್ಯಾಪಕರು, ವಕೀಲರಾದ ಕಿರಣ್ ಮತ್ತು ರವಿ ಹಾಗೂ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಪ್ರತಿನಿಧಿ ರಂಜಿತ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
