ಗುಬ್ಬಿ : ಸಮಾನತೆಯ ಸಂದೇಶ ಸಾರುವ ಮೂಲಕ ಪ್ರಬುದ್ಧ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಹಕ್ಕುಗಳನ್ನು ಕಲ್ಪಿಸಿದೆ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದ್ದು, ಪ್ರಜಾಪ್ರಭುತ್ವದ ಮೂಲಾಧಾರವೇ ನಮ್ಮ ಸಂವಿಧಾನವಾಗಿದೆ. 1949ರ ನವೆಂಬರ್ 26ರಂದು ಸಂವಿಧಾನ ಅಂಗೀಕಾರಗೊಂಡ ಐತಿಹಾಸಿಕ ದಿನವನ್ನು ಸ್ಮರಿಸುವ ಸಲುವಾಗಿ ಸಂವಿಧಾನ ದಿನ ಆಚರಿಸಲಾಗುತ್ತಿದೆ. ಸಂವಿಧಾನದ ಮೌಲ್ಯಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತತ್ವಗಳ ಮೇಲಿನ ಬದ್ಧತೆಯನ್ನು ಬಲಪಡಿಸಬೇಕು ಎಂದರು.
ಡಾ. ನಾಗಭೂಷಣ್ ಮಾತನಾಡಿ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳನ್ನು ಸಂವಿಧಾನವು ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳೆಂದು ಗುರುತಿಸಿದೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸದೆ ಅವುಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು. ಸ್ಥಳೀಯ ಸಂಸ್ಥೆಗಳ ಸ್ವಾಯತ್ತತೆ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಲು ಎಲ್ಲರೂ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಎಚ್. ಜಗನ್ನಾಥ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಶ್ರಮಿಸಿದ ಎಲ್ಲ ಮಹನೀಯರನ್ನು ಗೌರವದಿಂದ ಸ್ಮರಿಸಬೇಕು. ಸಂವಿಧಾನದ ಮೌಲ್ಯಗಳನ್ನು ನಮ್ಮ ನಡೆ-ನುಡಿಗಳಲ್ಲಿ ಅಳವಡಿಸಿಕೊಂಡು, ಹಕ್ಕುಗಳ ಗೌರವ ಹಾಗೂ ಕರ್ತವ್ಯಗಳ ಪಾಲನೆಯ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
