ತಿಪಟೂರು : ಬಸವಣ್ಣನವರ ಕುರಿತು ತಪ್ಪು ಹಾಗೂ ಆಕ್ಷೇಪಾರ್ಹ ಮಾಹಿತಿಗಳನ್ನು ಒಳಗೊಂಡಿದೆ ಎನ್ನಲಾದ ರವಿ ಹಂಜ್ ಅವರು ಬರೆದಿರುವ ‘ಬಸವ ಮಂಟಪ’ ಪುಸ್ತಕವನ್ನು ಕಾನೂನುಬದ್ಧವಾಗಿ ಮುಟ್ಟುಗೋಲು ಹಾಕಿಕೊಂಡು, ಲೇಖಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಪಟೂರಿನ ವಿವಿಧ ಮಠಾಧೀಶರು ಹಾಗೂ ವೀರಶೈವ ಸಂಘಟನೆಗಳ ಮುಖಂಡರು ಆಗ್ರಹಿಸಿದರು.
ನಗರದ ಕಂಚಘಟ್ಟದಲ್ಲಿರುವ ಶ್ರೀ ರುದ್ರಮುನಿ ಮಹಾಸ್ವಾಮಿಗಳ ಮಠದಲ್ಲಿ ವಿವಿಧ ಮಠಾಧೀಶರು ಹಾಗೂ ವೀರಶೈವ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ವಿಚಾರಧಾರೆ, ತತ್ವಾದರ್ಶಗಳು ಹಾಗೂ ಸಮಾಜ ಸುಧಾರಣೆಗೆ ನೀಡಿದ ಕೊಡುಗೆಗಳನ್ನು ತಪ್ಪಾಗಿ ಚಿತ್ರಿಸುವ ಪ್ರಯತ್ನಗಳು ಖಂಡನೀಯ ಎಂದು ತಿಳಿಸಿದರು.
ಬಸವಣ್ಣನವರು ಕಾಯಕ, ದಾಸೋಹ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಮೂಲಕ ಸಮಾಜಕ್ಕೆ ಹೊಸ ದಿಕ್ಕು ತೋರಿದ ಮಹಾನ್ ಶರಣರು. ಅವರ ತತ್ವಸಿದ್ಧಾಂತಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಆಕ್ಷೇಪಾರ್ಹ ವಿಚಾರಗಳನ್ನು ಪ್ರಕಟಿಸುವುದು ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತದೆ ಎಂದು ಮಠಾಧೀಶರು ಅಭಿಪ್ರಾಯಪಟ್ಟರು.
‘ಬಸವ ಮಂಟಪ’ ಪುಸ್ತಕದಲ್ಲಿರುವ ವಿವಾದಿತ ಅಂಶಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು. ಕಾನೂನು ಉಲ್ಲಂಘನೆಯಾಗಿರುವುದು ಕಂಡುಬಂದಲ್ಲಿ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಂಡು, ಲೇಖಕರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು. ಈ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸದೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಸವಣ್ಣನವರ ಸಾಮಾಜಿಕ ಸಮಾನತೆಯ ಸಂದೇಶ, ವಚನ ಸಾಹಿತ್ಯ ಹಾಗೂ ಮಾನವೀಯ ಮೌಲ್ಯಗಳ ಗೌರವ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಸೂಕ್ತವಾಗಿ ಸ್ಪಂದಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಅರಸೀಕೆರೆ ತಾಲೂಕಿನ ದೊಡ್ಡಮೇಟಿಕುರ್ಕೆ ವಿರಕ್ತ ಮಠದ ಶಶಿಶೇಖರ ಮಹಾಸ್ವಾಮಿಗಳು ಹಾಗೂ ಕಂಚಘಟ್ಟ ಮಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಗಳ ಪ್ರತಿನಿಧಿಗಳು ಮತ್ತು ವೀರಶೈವ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
