ಗುಬ್ಬಿ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದೂ ಅಷ್ಟೇ ಮುಖ್ಯವಾದ ಕರ್ತವ್ಯವಾಗಿದೆ ಎಂದು ನೆರಳು ಜನಸೇವಾ ಟ್ರಸ್ಟ್ ಅಧ್ಯಕ್ಷ ಜಗದೀಶ್ ತಿಳಿಸಿದರು.
ತಾಲೂಕಿನ ಮಾವಿನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗುಬ್ಬಿಯ ಚಾಲುಕ್ಯ ಆಸ್ಪತ್ರೆ ಹಾಗೂ ನೆರಳು ಜನಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ನೆರಳು ಜನಸೇವಾ ಟ್ರಸ್ಟ್ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಹಲವು ರೀತಿಯ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಇದೀಗ ಚಾಲುಕ್ಯ ಆಸ್ಪತ್ರೆಯೂ ನಮ್ಮೊಂದಿಗೆ ಕೈಜೋಡಿಸಿರುವುದು ಸಂತಸದ ವಿಚಾರವಾಗಿದೆ. ಸಿಎಸ್ ಪುರ ಹೋಬಳಿಯ ಎಲ್ಲಾ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಅನುಕೂಲ ಮಾಡಿಕೊಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ತಂಡ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಈಗಾಗಲೇ ಕಣ್ಣಿನ ತಪಾಸಣೆ, ದಂತ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಾಗಿದೆ. ವಿಶೇಷ ಚೇತನರಿಗೆ ವೀಲ್‌ಚೇರ್ ಹಾಗೂ ಕೃತಕ ಕಾಲುಗಳನ್ನು ವಿತರಿಸುವ ಮೂಲಕ ನೆರವು ನೀಡಲಾಗಿದೆ. ಇಂದು ನಡೆದ ಶಿಬಿರದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದರು.
ಚಾಲುಕ್ಯ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ. ರಶ್ಮಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಹಿನ್ನೆಲೆಯಿಂದ ಬಂದವರಾಗಿದ್ದು, ಆರ್ಥಿಕವಾಗಿಯೂ ಹಿಂದುಳಿದ ಕುಟುಂಬಗಳಿಗೆ ಸೇರಿದವರಾಗಿರುತ್ತಾರೆ. ಇಂತಹ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗುಬ್ಬಿ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ನಮ್ಮ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಡಾ. ನಾಗಭೂಷಣ್, ಶಾಲೆಯ ಮುಖ್ಯ ಶಿಕ್ಷಕ ರಘುನಾಥ್, ಪವನ್, ನಾಗರಾಜು, ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರದೀಪ್, ನವಾಜ್, ಶಾಬಾಜ್ ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
