ಕುಣಿಗಲ್ :ಪಟ್ಟಣದ ಕೆಆರ್ ಎಸ್ ಅಗ್ರಹಾರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀಕೃಷ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಅಡ್ಡಿಪಡಿಸಿ, ದೇವಸ್ಥಾನದ ಆವರಣದಲ್ಲಿದ್ದ ಕಲ್ಲಿನ ಕಂಬಗಳನ್ನು ರಾತ್ರೋರಾತ್ರಿ ತೆರವುಗೊಳಿಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ತಹಸೀಲ್ದಾರ್ ಕೂಡಲೇ ಮಧ್ಯಪ್ರವೇಶಿಸಿ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೇವಸ್ಥಾನದ ಭಕ್ತರು ಒತ್ತಾಯಿಸಿದ್ದಾರೆ.
ಪುರಾತನ ಇತಿಹಾಸ ಹೊಂದಿರುವ ಶ್ರೀಕೃಷ್ಣಸ್ವಾಮಿ ದೇವಸ್ಥಾನವು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದೆ. ಹಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿದ್ದ ದೇವಸ್ಥಾನದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸ್ಥಳೀಯ ಭಕ್ತರ ಸಹಕಾರದೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕೃಷ್ಣಸ್ವಾಮಿ ಆರಾಧನೆ, ಉತ್ಸವ, ಸತ್ಯನಾರಾಯಣ ಪೂಜೆ ಹಾಗೂ ಕೃಷ್ಣ–ರಾಧೆ ವೇಷಭೂಷಣ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿಯೂ ಧಾರ್ಮಿಕ ಮತ್ತು ಸಾಂಸ್ಕೃತಿಕ ಆಸಕ್ತಿ ಬೆಳೆಸಲಾಗುತ್ತಿದೆ. ದೇವಸ್ಥಾನದಲ್ಲಿ ಪ್ರತಿನಿತ್ಯ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ ಪಡೆಯಲು ಸೂಕ್ತ ಪ್ರಾಂಗಣದ ವ್ಯವಸ್ಥೆ ಇಲ್ಲದಿರುವುದನ್ನು ಮನಗಂಡ ಸ್ಥಳೀಯ ಭಕ್ತರು, ದಾನಿಗಳ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಮುಂಭಾಗದಲ್ಲಿ ಪ್ರಾಂಗಣ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ, ಮಾಜಿ ಪುರಸಭಾ ಅಧ್ಯಕ್ಷ ಕೆ.ಎಲ್. ಹರೀಶ್ ಅವರು ಸದರಿ ಆಸ್ತಿ ತಮ್ಮದಾಗಿದೆ ಎಂದು ಹೇಳಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೇವಸ್ಥಾನದ ಹೆಸರಿನಲ್ಲಿರುವ ಜಾಗವನ್ನು ಸರ್ವೆ ನಡೆಸಿ, ಗಡಿ ಗುರುತಿಸಿಕೊಡುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಅದರಂತೆ ಸರ್ವೆ ಕಾರ್ಯ ನಡೆಸಿ ಜಾಗವನ್ನು ಗುರುತಿಸಲಾಗಿದೆ. ಸರ್ವೆ ನಕ್ಷೆ ಲಭ್ಯವಾದ ಕೂಡಲೇ ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಸ್ಥಳೀಯ ಭಕ್ತ ಸುರೇಶ್ ತಿಳಿಸಿದ್ದಾರೆ.
ದೇವಸ್ಥಾನಕ್ಕೆ 1.25 ಗುಂಟೆ ಆಸ್ತಿ
ದೇವಸ್ಥಾನದ ಆರಾಧಕ ಮಂಜುನಾಥ್ ಮಾತನಾಡಿ, ಶ್ರೀಕೃಷ್ಣಸ್ವಾಮಿ ದೇವಸ್ಥಾನಕ್ಕೆ 1.25 ಗುಂಟೆ ಜಮೀನು ಇದ್ದು, ಈಗಾಗಲೇ ಸರ್ವೆ ಕಾರ್ಯ ಪೂರ್ಣಗೊಂಡಿದೆ. ದೇವಸ್ಥಾನವು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಸರ್ಕಾರಿ ನಿಯಮಾನುಸಾರ ದೇವಸ್ಥಾನದ ಆವರಣದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಭಕ್ತರಿಗೆ ಅನುಕೂಲವಾಗುವಂತೆ ಪ್ರಾಂಗಣ ನಿರ್ಮಾಣ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಪ್ರಕಾಶ್, ರಮೇಶ್, ಮಂಜುನಾಥ್ ಸೇರಿದಂತೆ ಇತರ ಭಕ್ತರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
