ತುಮಕೂರು: ಜಿಲ್ಲೆಯ ಸಿರಾ ತಾಲೂಕಿನ ಶಾಲೆಯೊಂದರಲ್ಲಿ ಅಗ್ನಿ ಅವಘಡಕ್ಕೆ ತುತ್ತಾಗಿದ್ದ ಮಗು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಸೋಮವಾರ ಮಗು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.
ಸಿರಾ ತಾಲ್ಲೂಕಿನ ಮೆಳೆಕೋಟೆ ಸರ್ಕಾರಿ ಶಾಲೆಯಲ್ಲಿ ಶಾಲಾ ಸಮಯದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಅಗ್ನಿ ಅವಘಡಕ್ಕೆ ತುತ್ತಾಗಿ ತೀವ್ರವಾಗಿ ಗಾಯಗೊಂಡಿದ್ದಳು. ಈಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ನೂರ್ ಉನ್ನಿಸಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಮಗುವಿಗೆ ಪರಿಹಾರ ನೀಡುವ ಸಂಬಂಧ ಚರ್ಚಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶಾಲಾ ಸಮಯದಲ್ಲಿ ಈ ಘಟನೆಯಾಗಿರುವುದರಿಂದ ಶಿಕ್ಷಕರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸುಮೋಟೋ ಪ್ರಕರಣ ದಾಖಲಿಸಲಾಗಿದ್ದು, ಎಫ್ ಐಆರ್ ಆಗಿದೆ. ಘಟನೆಯ ಸಂಪೂರ್ಣ ತನಿಖೆ ನಡೆಯಬೇಕಿದೆ ಎಂದು ನಮ್ಮತುಮಕೂರಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


