ಬೆಂಗಳೂರು: ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ತಂದೆಯೇ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ ನ ಮನೆಯೊಂದರಲ್ಲಿ ಸುರೇಶ್ ಎಂಬವರು ಮಗ ನರ್ತನ್ ಬೋಪಣ್ಣ(32) ಅವರನ್ನು ಕೊಲೆ ಮಾಡಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮನೆಗೆ ತೆರಳಿದಾಗ, ನರ್ತನ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಎನ್ನಲಾಗಿದೆ.
ಜೀವನ್ಮರಣ ಸ್ಥಿತಿಯಲ್ಲಿದ್ದ ನರ್ತನ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸದಾ ಕಾಲ ಕುಡಿತದ ಗುಂಗಿನಲ್ಲೇ ಇರುತ್ತಿದ್ದ ಸುರೇಶ್ ಕುಡಿಯಲು ಹಣ ಬೇಕು ಎಂದು ಮಗನನ್ನು ಪೀಡಿಸುತ್ತಿದ್ದರು ಎನ್ನಲಾಗಿದೆ. ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ತಂದೆ ಮಗನನ್ನು ಕೊಂದಿದ್ದಾರೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


