ತುರುವೇಕೆರೆ: ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಅವರ ಜಯಂತಿಗಳನ್ನು ಆಚರಿಸುವ ನೈತಿಕ ಅರ್ಹತೆ ಇಲ್ಲ ಎಂದು ಸಮಿತಿಯ ಮುಖಂಡರು ಕಿಡಿಕಾರಿದ್ದಾರೆ.
ಪಟ್ಟಣದ ದಲಿತ ಸಂಘರ್ಷ ಸಮಿತಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಬಾಬು ಜಗಜೀವನ್ ರಾಂ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್, ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಹಾವನೂರು, ಕಾಂತರಾಜು, ನಾಗಮೋಹನ್ ದಾಸ್ ಹಾಗೂ ಎ.ಜೆ.ಸದಾಶಿವ ಆಯೋಗದ ವರದಿಗಳ ಪ್ರಕಾರ ರಾಜ್ಯದಲ್ಲಿ ಮಾದಿಗ ಸಮುದಾಯದವರು ಬಹುಸಂಖ್ಯಾತರಾಗಿದ್ದಾರೆ. ಸರ್ಕಾರ ಒಳ ಮೀಸಲಾತಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರೂ, ಕೆಲವು ಸಚಿವರ ಹಿತಾಸಕ್ತಿ ಮತ್ತು ವಿರೋಧದಿಂದಾಗಿ ಪ್ರಕ್ರಿಯೆ ತಡೆಹಿಡಿಯಲಾಗಿದೆ ಎಂದು ಅವರು ದೂರಿದರು.
ಒಳ ಮೀಸಲಾತಿ ಜಾರಿಯಾಗದ ಕಾರಣ ಸುಮಾರು 56,419 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕುಂಠಿತಗೊಂಡಿದ್ದು, ಅರ್ಹ ಸಮುದಾಯದ ಜನರಿಗೆ ಭಾರಿ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿದ ಮುಖಂಡರು, ಕೂಡಲೇ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆಯ ಮಾಜಿ ಸದಸ್ಯ ಚಿದಾನಂದ್, ಡಿಎಸ್‌ಎಸ್ ತಾಲ್ಲೂಕು ಸಂಚಾಲಕ ಮಲ್ಲೂರು ತಿಮ್ಮೇಶ್, ಮತ್ತು ಸಮಿತಿಯ ಪ್ರಮುಖರಾದ ಗುರುದತ್, ಕೃಷ್ಣಣ್ಣ, ಗೋವಿಂದರಾಜು, ಬಸವರಾಜು, ಕೆಂಪಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


