ಗದಗ: ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನಲ್ಲಿ ಚಿರತೆ ದಾಳಿಯಿಂದ, ನಾಲ್ಕು ಜನ ಗಾಯಗೊಂಡ ಘಟನೆ ಜೀಗೇರಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆಯಷ್ಟೇ ತೋಟದಲ್ಲಿ ಕೆಲಸ ಮಾಡುತ್ತಿದ್ದಾತನ ಮೇಲೆ ದಾಳಿ ಮಾಡಿದ್ದ ಚಿರತೆ, ಸಂಜೆ ವೇಳೆ ಮತ್ತೆ ನಾಲ್ಕು ಜನರ ಮೇಲೆ ದಾಳಿ ನಡೆಸಿದೆ.
ಚಿರತೆಯು ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಮೇಲೆ ಎರಗಿದ್ದು, ದಾಳಿಗೊಳಗಾದವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಚಿರತೆ ದಾಳಿಯಿಂದ ಸುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಚಿರತೆ ಸೆರೆ ಹಿಡಿಯಲು ಪ್ರಯತ್ನ ನಡೆಸಿದ್ದಾರೆ.


