ತುಮಕೂರು : ಜಿಲ್ಲೆಯ ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿ ಹಾಗೂ ಪಶು ಪಾಲಕರಿಗೆ ಗುಣಮಟ್ಟದ ಪಶುವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ನಗರದ ಕಲ್ಟೆಕ್ಸ್ ಸರ್ಕಲ್ ಬಳಿಯ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಲಾಖೆಯ ಆಡಳಿತ ಕಚೇರಿ, ಸಭಾಂಗಣ, ಪಶು ಆಸ್ಪತ್ರೆ ಹಾಗೂ ಪಶು ಚಿಕಿತ್ಸಾಲಯಗಳ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವುದರ ಜೊತೆಗೆ ಪೂರ್ಣಗೊಂಡ ಕಟ್ಟಡಗಳನ್ನು ಉದ್ಘಾಟಿಸಲಾಯಿತು.
₹2 ಕೋಟಿ ವೆಚ್ಚದಲ್ಲಿ ಪಶು ಸಂಗೋಪನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಆಡಳಿತ ಕಚೇರಿ ಹಾಗೂ ಉಪ ನಿರ್ದೇಶಕರ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಇಲಾಖೆಯ ಆಡಳಿತಾತ್ಮಕ ಕಾರ್ಯ ಚಟುವಟಿಕೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಕಟ್ಟಡ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಉತ್ತಮ ಕಾರ್ಯ ನಿರ್ವಹಣಾ ವಾತಾವರಣ ದೊರೆಯುವ ನಿರೀಕ್ಷೆಯಿದೆ.
ಇದೇ ಸಂದರ್ಭದಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಯಿತು. ಇಲಾಖೆಯ ಸಭೆಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ವಿವಿಧ ಶೈಕ್ಷಣಿಕ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಸಭಾಂಗಣ ಅನುಕೂಲವಾಗಲಿದೆ.
ಗ್ರಾಮೀಣ ಭಾಗದ ಪಶು ಪಾಲಕರಿಗೆ ಸ್ಥಳೀಯವಾಗಿಯೇ ಪಶು ವೈದ್ಯಕೀಯ ಸೇವೆ ದೊರೆಯುವಂತೆ ಮಾಡುವ ಉದ್ದೇಶದಿಂದ ಬೆಳ್ಳಾವಿ ಮತ್ತು ಅರಕೆರೆ ಗ್ರಾಮಗಳಲ್ಲಿ ತಲಾ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪಶು ಆಸ್ಪತ್ರೆಗಳ ಕಟ್ಟಡಗಳನ್ನು ಉದ್ಘಾಟಿಸಲಾಯಿತು. ಇದರಿಂದ ಸುತ್ತಮುತ್ತಲಿನ ಗ್ರಾಮಗಳ ರೈತರು ಮತ್ತು ಪಶು ಪಾಲಕರಿಗೆ ಜಾನುವಾರುಗಳ ಆರೋಗ್ಯ ತಪಾಸಣೆ, ಚಿಕಿತ್ಸೆ ಸೇರಿದಂತೆ ಅಗತ್ಯ ಪಶು ವೈದ್ಯಕೀಯ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ.
ಅಲ್ಲದೆ, ಹಿರೇಗುಂಡಕಲ್ ನಲ್ಲಿ ₹50 ಲಕ್ಷ ವೆಚ್ಚದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಪಶು ಸಂಗೋಪನೆ ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ಹೈನುಗಾರಿಕೆ ಮತ್ತು ಜಾನುವಾರು ಸಾಕಾಣಿಕೆಯನ್ನು ಅವಲಂಬಿಸಿರುವ ರೈತರಿಗೆ ಸಕಾಲದಲ್ಲಿ ಪಶು ವೈದ್ಯಕೀಯ ಸೇವೆ ದೊರೆಯುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಕಟ್ಟಡಗಳ ಅಭಿವೃದ್ಧಿ, ಆಸ್ಪತ್ರೆಗಳ ಮೂಲ ಸೌಕರ್ಯ ವಿಸ್ತರಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಬಲವರ್ಧನೆಗೆ ಕೈಗೊಂಡಿರುವ ಕ್ರಮಗಳು ಪಶು ಪಾಲಕರಿಗೆ ಅನುಕೂಲ ಕಲ್ಪಿಸುವ ನಿರೀಕ್ಷೆಯಿದೆ.
ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಿಜಾ, ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನ ಪ್ರತಿ ನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
