ಪಾವಗಡ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಉತ್ತಮ ಬಾಂಧವ್ಯ, ಪರಸ್ಪರ ಸಹಕಾರ ಹಾಗೂ ಸಮನ್ವಯ ಮನೋಭಾವವೇ ಬಲಿಷ್ಠ ಒಕ್ಕೂಟ ವ್ಯವಸ್ಥೆಯ ಪ್ರಮುಖ ಆಧಾರವಾಗಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶ್ರೀಪಾದ ಕುಲಕರ್ಣಿ ತಿಳಿಸಿದರು.
ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ನ.20) ಆಯೋಜಿಸಿದ್ದ ‘ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧಗಳು ಹಾಗೂ ಸಮಕಾಲೀನ ವಿಚಾರಗಳು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಭಾರತವು ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಪ್ರಭಾವ ಮತ್ತು ಗೌರವವನ್ನು ಗಳಿಸಲು ದೇಶದ ಆಂತರಿಕ ಶಕ್ತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಉತ್ತಮ ಸಂಬಂಧಗಳು ಪ್ರಮುಖ ಪಾತ್ರ ವಹಿಸಿವೆ. ನದಿ ನೀರು ಹಂಚಿಕೆ, ಗಡಿ ವಿವಾದ, ಭಾಷೆ ಹಾಗೂ ಜನಾಂಗೀಯ ಸಮಸ್ಯೆಗಳಂತಹ ಸವಾಲುಗಳು ಒಕ್ಕೂಟ ವ್ಯವಸ್ಥೆಯ ಮುಂದಿದ್ದರೂ, ಅವುಗಳನ್ನು ಪರಸ್ಪರ ಮಾತುಕತೆ ಮತ್ತು ಸಹಕಾರದ ಮೂಲಕ ಬಗೆಹರಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಇದರಿಂದ ದೇಶದ ಒಕ್ಕೂಟ ವ್ಯವಸ್ಥೆ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರು ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರದ ಬಗ್ಗೆ ಗೌರವ ಬೆಳೆಸಿಕೊಳ್ಳುವುದರ ಜೊತೆಗೆ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನದ ಆಶಯಗಳ ಕುರಿತು ಅರಿವು ಹೊಂದಬೇಕು ಎಂದು ಕರೆ ನೀಡಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗೇಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನ ಇತಿಹಾಸ ಹಾಗೂ ರಾಜ್ಯಶಾಸ್ತ್ರ ವಿಭಾಗದ ಶೈಕ್ಷಣಿಕ ಕೊಡುಗೆಗಳನ್ನು ಸ್ಮರಿಸಿದರು. ಐಕ್ಯೂಎಸಿ ಸಂಚಾಲಕ ರಾಜಣ್ಣ ಮಾತನಾಡಿ, ಇಂತಹ ಶೈಕ್ಷಣಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನ, ಆತ್ಮವಿಶ್ವಾಸ ಹಾಗೂ ವಿಶ್ಲೇಷಣಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಅನಂತರಾಜ್, ಅರುಣ್ ಕುಮಾರ್, ಸುಮಾದೇವಿ, ಡಾ. ಗೌಡಪ್ಪ, ನಾಗರಾಜ್, ಹಚ್ರವರು, ಮುತ್ಯಾಲಣ್ಣ, ಪ್ರಕಾಶ್, ಬಸವರಾಜ್ ಎಂ.ಸಿ. ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
