ತುಮಕೂರು: ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳ ರಚನೆ, ಸದಸ್ಯತ್ವ ಹಾಗೂ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ನಿಗದಿತ ಗುರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಭಾರತ್ ಜೋಡೊ ಯುವ ಸಂಘಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುಮಕೂರು ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 329 ಹಾಗೂ ನಗರ ಪ್ರದೇಶಗಳಲ್ಲಿ 87 ಸೇರಿದಂತೆ ಒಟ್ಟು 416 ಭಾರತ್ ಜೋಡೊ ಯುವ ಸಂಘಗಳನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಈ ಸಂಘಗಳ ರಚನೆ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಯುವ ಸಂಘಗಳ ಸದಸ್ಯತ್ವ ನೋಂದಣಿ, ಸಂಘಗಳ ರಚನೆ, ನೋಂದಣಿ ಪ್ರಕ್ರಿಯೆ ಹಾಗೂ ಅವುಗಳ ಕಾರ್ಯ ಚಟುವಟಿಕೆಗಳ ರೂಪುರೇಷೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಯುವಕರನ್ನು ಸಂಘಟಿಸುವುದು ಹಾಗೂ ಸಂಘಗಳ ಮೂಲಕ ಯುವಜನರ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಭೂಮಾಪನ ಇಲಾಖೆಯ ಆಯುಕ್ತರು ಹಾಗೂ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ರಾಕೇಶ್ ಕೆ., ಉಪ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ವೆಂಕಟೇಶಯ್ಯ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ನಹಿದಾ ಜಮ್ ಜಮ್, ಮಹಾನಗರ ಪಾಲಿಕೆ ಆಯುಕ್ತೆ ಶುಭಾ ಹಾಗೂ ಭಾರತ್ ಜೋಡೊ ಯುವ ಸಂಘದ ಯೋಜನಾ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
