ತುಮಕೂರು: ಬರುವ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕುಡಿಯುವ ನೀರು ಮತ್ತು ಮೇವಿನ ಸ್ಥಿತಿ–ಗತಿ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ 6 ತಿಂಗಳಲ್ಲಿ ಕುಡಿಯುವ ನೀರಿಗೆ ಬವಣೆಯುಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ ಅಗತ್ಯವಿರುವ ಕಡೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು.
ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಜಿಲ್ಲೆಯಲ್ಲಿರುವ ಎಲ್ಲ ಕೊಳವೆಬಾವಿ, ಆರ್.ಓ. ಘಟಕಗಳನ್ನು ಸುಸ್ಥಿತಿಯಲ್ಲಿಡಬೇಕು. ಕೆಟ್ಟು ನಿಂತಿರುವ ಕೊಳವೆ ಬಾವಿ, ಕುಡಿಯುವ ನೀರಿನ ಘಟಕಗಳನ್ನು ತುರ್ತಾಗಿ ದುರಸ್ತಿಪಡಿಸಬೇಕು ಎಂದು ಸೂಚನೆ ನೀಡಿದರಲ್ಲದೆ ಬೇಸಿಗೆಯಲ್ಲಿ ಜಾನುವಾರುಗಳ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸಂಜೀವಪ್ಪ ಮಾತನಾಡಿ, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ವಿನಿಯೋಗಿಸಲು ಜಿಲ್ಲಾ ಪಂಚಾಯತಿಯಲ್ಲಿ 5 ಕೋಟಿ ರೂ.ಗಳ ಅನುದಾನ ಲಭ್ಯವಿದ್ದು, ಸಂಬAಧಿಸಿದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ತಾಲ್ಲೂಕು ಕಾರ್ಯಪಡೆ ಸಭೆಯಲ್ಲಿ ಅನುಮೋದನೆ ಪಡೆದು ಗ್ರಾಮಗಳ ಪಟ್ಟಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಿದಲ್ಲಿ ಅನುದಾನ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ್ ಮಾತನಾಡಿ, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 253 ವಾರ್ಡುಗಳ ಪೈಕಿ ಪ್ರಸ್ತುತ ಮಧುಗಿರಿ ಪುರಸಭೆ ವ್ಯಾಪ್ತಿಯ 2 ವಾರ್ಡುಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದಂತೆ ಯಾವುದೇ ವಾರ್ಡುಗಳಲ್ಲಿ ನೀರಿನ ಸಮಸ್ಯೆ ಎದುರಾಗಿಲ್ಲ ಎಂದು ಮಾಹಿತಿ ನೀಡಿದರು.
ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡುತ್ತಾ, ಜಾನುವಾರುಗಳಿಗೆ ಸದ್ಯಕ್ಕೆ ಮೇವಿನ ಕೊರತೆ ಇರುವುದಿಲ್ಲ. ಜಾನುವಾರುಗಳಿಗೆ ಮೇವು ಉತ್ಪಾದಿಸಲು ನೀರಾವರಿ ಸೌಲಭ್ಯವಿರುವ ರೈತರಿಗೆ ಮೇವಿನ ಬೀಜದ ಮಿನಿ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನಂತರ ಅಪರ ಜಿಲ್ಲಾಧಿಕಾರಿಗಳು ಗ್ರಾಮೀಣ ಪ್ರದೇಶ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಸಂಬಂಧಿಸಿದಂತೆ ತಾಲ್ಲೂಕುವಾರು ಸ್ಥಿತಿ–ಗತಿ ಬಗ್ಗೆ ಪರಿಶೀಲಿಸಿದರು. ಹೊಸದಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಹಾಗೂ ಕೊಳವೆ ಮಾರ್ಗ ಅಳವಡಿಕೆಯನ್ನು ತುರ್ತಾಗಿ ಕೈಗೊಳ್ಳಬೇಕು. ಬರುವ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್, ತಹಶೀಲ್ದಾರ್ ರಾಜೇಶ್ವರಿ, ಪಾಲಿಕೆ ಇಂಜಿನಿಯರ್ ಸಂದೀಪ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: