ಬೆಂಗಳೂರು: ಪಂಚಮಸಾಲಿ ಹೋರಾಟವನ್ನ ಹತ್ತಿಕ್ಕಲು ರಾಜ್ಯ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ. ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ ಎಂದು ಸರಕಾರದ ವಿರುದ್ಧ ಗುಡುಗಿದ್ದಾರೆ.
ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx