ತುಮಕೂರು: ಮಳೆ, ಚಳಿಯನ್ನೂ ಲೆಕ್ಕಿಸದೆ ತಮ್ಮ ಪುಟ್ಟ ಮಕ್ಕಳೊಂದಿಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (AIDSO) ವತಿಯಿಂದ ಗುರುವಾರ ನಗರದಲ್ಲಿ ‘ರಾಜ್ಯವ್ಯಾಪಿ ವಿದ್ಯಾರ್ಥಿಗಳ ಆಗ್ರಹ ದಿನ’ ಆಚರಿಸಲಾಯಿತು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಜೂನಿಯರ್ ಕಾಲೇಜು ಮೈದಾನ ಸೇರಿದಂತೆ ವಿವಿಧ ಶೈಕ್ಷಣಿಕ ಕೇಂದ್ರಗಳ ಬಳಿ ಜಮಾಯಿಸಿದ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, “ಎರಡು ವರ್ಷಗಳ ಹಿಂದೆ ಆಶಾ ಕಾರ್ಯಕರ್ತೆಯರಿಗೆ 10,000 ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವು, ಈ ಕುರಿತು ಸಾಮಾಜಿಕ ಜಾಲತಾಣಗಳು ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಪಡೆದುಕೊಂಡಿತ್ತು. ಆದರೆ, ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರ್ಕಾರವು ಅವರಿಗೆ ಮೋಸ ಮಾಡಿದೆ. ಸರ್ಕಾರದ ಕೇವಲ ಮೌಖಿಕ ಭರವಸೆಗಳಿಗೆ ಮಣಿಯದೆ, ಅಧಿಕೃತ ಆದೇಶ ಹೊರಡಿಸುವವರೆಗೂ ಹೋರಾಟ ಮುಂದುವರಿಸಲು ಪಟ್ಟು ಹಿಡಿದಿರುವ ಆಶಾ ಕಾರ್ಯಕರ್ತೆಯರ ದಿಟ್ಟ ನಿಲುವನ್ನು ಎಐಡಿಎಸ್ ಓ ಶ್ಲಾಘಿಸುತ್ತದೆ” ಎಂದರು.
ಮುಂದುವರಿದು ಮಾತನಾಡಿದ ಅವರು, “ಒಂದೆಡೆ ಬೆಂಗಳೂರಿನ ಟನೆಲ್ ರಸ್ತೆ ಯೋಜನೆಗೆ 20,000 ಕೋಟಿ ರೂ., ಕಾರ್ಪೊರೇಟ್ ಕಂಪನಿಗಳಿಗೆ ಸಾವಿರಾರು ಕೋಟಿ ರೂ. ತೆರಿಗೆ ವಿನಾಯಿತಿ ಹಾಗೂ ಸರ್ಕಾರದ ಜಾಹೀರಾತುಗಳಿಗೆ 500 ಕೋಟಿ ರೂ.ಗಳಷ್ಟು ದುಂದು ವೆಚ್ಚ ಮಾಡಲಾಗುತ್ತಿದೆ. ಆದರೆ, ಹಗಲು-ರಾತ್ರಿ ಎನ್ನದೆ ಕಿಲೋಮೀಟರ್ಗಟ್ಟಲೆ ನಡೆದು ಮನೆ-ಮನೆಗೆ ಆರೋಗ್ಯ ಸೇವೆ ಒದಗಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ಹಕ್ಕಿನ ಗೌರವಧನ ಕೇಳಿದಾಗ, ‘ಕೇಳಿದಾಗಲೆಲ್ಲಾ ಕಂಠಿಹಾರ ಕೊಡಲು ಸಾಧ್ಯವಿಲ್ಲ’ ಎಂದು ಸಚಿವರೊಬ್ಬರು ಹಗುರವಾಗಿ ಮಾತನಾಡಿದ್ದಾರೆ. ಸಚಿವರ ಈ ಬೇಜವಾಬ್ದಾರಿ ಹೇಳಿಕೆಗೆ ಎಐಡಿಎಸ್ ಓ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತದೆ” ಎಂದು ಆಕ್ರೋಶ ಹೊರಹಾಕಿದರು.
ಶ್ರಮಜೀವಿಗಳಾದ ಆಶಾ ತಾಯಂದಿರ ಗೋಳನ್ನು ಆಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
