ತುಮಕೂರು: ದಸರಾ ಉತ್ಸವದ ಅಂಗವಾಗಿ ಸಾರ್ವಜನಿಕರಿಗೆ ಆರು ನಿಮಿಷಗಳ ಆಕಾಶಯಾನದ ಹೆಸರಿನಲ್ಲಿ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಹೆಲಿರೈಡ್ ಗೆ ಅವಕಾಶ ಕಲ್ಪಿಸಿರುವುದಕ್ಕೆ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಖಾಸಗಿ ಸಂಸ್ಥೆಗಳ ವಾಣಿಜ್ಯ ಹಿತಾಸಕ್ತಿಗಿಂತ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಜಿಲ್ಲಾಡಳಿತ ಹಾಗೂ ವಿಶ್ವವಿದ್ಯಾಲಯ ಆದ್ಯತೆ ನೀಡಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಹೆಲಿಕಾಪ್ಟರ್ ಹಾರಾಟದ ಶಬ್ದದಿಂದಾಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಪಾಠ ಕೇಳಲು ಹಾಗೂ ಅಧ್ಯಯನ ಮಾಡಲು ತೀವ್ರ ಅಡಚಣೆಯಾಗುತ್ತಿದೆ. ಸಾರ್ವಜನಿಕ ಶಿಕ್ಷಣದ ಉದ್ದೇಶಕ್ಕಾಗಿ ಸ್ಥಾಪನೆಯಾದ ವಿಶ್ವವಿದ್ಯಾಲಯದ ಆವರಣವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸುವುದು ಎಷ್ಟು ಸಮಂಜಸ ಎಂಬ ಪ್ರಶ್ನೆ ಎದ್ದಿದೆ. ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ವಲಯದಿಂದ ಆಕ್ಷೇಪಣೆಗಳು ಬಂದರೂ ಜಿಲ್ಲಾಡಳಿತ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿರುವುದು ಖಂಡನೀಯ.
ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶೈಕ್ಷಣಿಕ ಕೇಂದ್ರಗಳಾಗಬೇಕೇ ಹೊರತು ಖಾಸಗಿ ಸಂಸ್ಥೆಗಳ ಲಾಭಕೋರತನ ಮತ್ತು ವಾಣಿಜ್ಯ ಹಿತಾಸಕ್ತಿಗಳನ್ನು ಪೂರೈಸುವ ತಾಣಗಳಾಗಬಾರದು ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕೂಡಲೇ ವಿವಿ ಆವರಣದಲ್ಲಿನ ಹೆಲಿರೈಡ್ ಚಟುವಟಿಕೆಯನ್ನು ತಡೆದು ಪರ್ಯಾಯ ವ್ಯವಸ್ಥೆ ಮಾಡಬೇಕು. ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕಲಿಯಲು ಸೂಕ್ತ ಶೈಕ್ಷಣಿಕ ವಾತಾವರಣವನ್ನು ಕಾಪಾಡುವುದು ಜಿಲ್ಲಾಡಳಿತದ ಮೂಲಭೂತ ಜವಾಬ್ದಾರಿಯಾಗಿದೆ ಎಂದು ಎಐಡಿಎಸ್ ಓ ಆಗ್ರಹಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
