ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣ ವ್ಯಾಪ್ತಿಯ ಗುಂಡುತೋಪು ಒಂದರಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿದ್ದು, ಅವರಿಗೆ ತಾತ್ಕಾಲಿಕ ಪುನರ್ವಸತಿ ಹಾಗೂ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭೂಮಿ ವಸತಿ ಹೋರಾಟ ಸಮಿತಿ ತುಮಕೂರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದು, ಈ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದೆ.
ಸಮಿತಿಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ, ತಕ್ಷಣವೇ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಗಂಜಿಕೇಂದ್ರ ತೆರೆಯಲು ಸೂಚನೆ ನೀಡಿದ್ದು, ಇದರನ್ವಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಚಿ.ನಾ.ಹಳ್ಳಿ ತಹಸಿಲ್ದಾರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಪುರಸಭೆಯ ಮುಖ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ತುರ್ತು ಕ್ರಮ ವಹಿಸಿ ಚಿ.ನಾ.ಹಳ್ಳಿ ಪಟ್ಟಣದ ಶ್ರೀಶಕ್ತಿ ಭವನದಲ್ಲಿ ಈ ಕುಟುಂಬಗಳಿಗೆ ಗಂಜಿಕೇಂದ್ರ ತೆರೆದು, ಇಂದಿರಾ ಕ್ಯಾಂಟಿನ್ ನಲ್ಲಿ ಊಟದ ವ್ಯವಸ್ಥೆ ಮಾಡಿದ್ದಾರೆ ಎಂದು ಸಮಿತಿ ಮುಖಂಡರು ತಿಳಿಸಿದ್ದಾರೆ.
ಚಿಕ್ಕನಾಯಕನಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ಸುಮಾರು 12 ದಿನಗಳಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಅಲೆಮಾರಿಗಳ ಗುಡಿಸಲಿಗೆ ನೀರು ನುಗ್ಗಿತ್ತು. ಇವರ ಸಂಕಷ್ಟವನ್ನು ಮನಗಂಡ ತುಮಕೂರು ಭೂಮಿ ವಸತಿ ಹೋರಾಟ ಸಮಿತಿ ತಕ್ಷಣವೇ ಜಿಲ್ಲಾಡಳಿತವನ್ನು ಎಚ್ಚರಿಸಿ, ಅಲೆಮಾರಿಗಳ ಸಂಕಷ್ಟಕ್ಕೆ ನೆರವಾಗಿದೆ. ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700