ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಕ್ರೋ–ಫೈನಾನ್ಸ್ ಕಂಪನಿಗಳಿಂದ ಸಾಲಗಾರರ ಮೇಲೆ ನಡೆಯುತ್ತಿರುವ ಕಿರುಕುಳ ಹಿನ್ನೆಲೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
ಮೈಕ್ರೋಫೈನಾನ್ಸ್ ಕಂಪನಿಗಳ ಸಂಘದ ಪ್ರತಿನಿಧಿಗಳು, ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಾದೇಶಿಕ ಅಧಿಕಾರಿಗಳು ಮತ್ತು ನಬಾರ್ಡ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.
ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಸಾಲ ವಸೂಲಾತಿ ವೇಳೆ ಆರ್ ಬಿಐ ನಿಯಮದಂತೆ ನಡೆದುಕೊಳ್ಳಬೇಕು. ಸಂಜೆ 5 ಗಂಟೆ ನಂತರ ಸಾಲ ವಸೂಲಾತಿಗೆ ಹೋಗಬಾರದು. ಮೈಕ್ರೋ ಫೈನಾನ್ಸ್, ಗಿರವಿ ಅಂಗಡಿಯವರು ಈ ಕಾನೂನು ಪಾಲಿಸಬೇಕು. ಕಾನೂನು ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಮುಲಾಜಿಲ್ಲದೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಾಲ ನೀಡಬೇಡಿ ಅಥವಾ ಸಾಲಗಾರರಿಂದ ಸಾಲ ವಸೂಲಿ ಮಾಡಬೇಡಿ ಎಂದು ನಾವು ಹೇಳುವುದಿಲ್ಲ. ಆದರೆ ಸಾಲ ವಸೂಲಿ ಮಾಡುವಾಗ ನೀವು ಜನರನ್ನು ಹಿಂಸಿಸಬಾರದು ಮತ್ತು ಕಿರುಕುಳ ನೀಡಬಾರದು ಎಂದು ಸಿದ್ದರಾಮಯ್ಯ ತಾಕೀತು ಮಾಡಿದರು.
ಸಾಲ ವಸೂಲಿ ಮಾಡುವಾಗ, ಆರ್ಬಿಐ ಮಾರ್ಗಸೂಚಿಗಳನ್ನು ಮೈಕ್ರೋ-ಫೈನಾನ್ಸ್ ಕಂಪನಿಗಳು ಕಡ್ಡಾಯವಾಗಿ ಪಾಲಿಸಬೇಕು. ಕೇಂದ್ರ ಬ್ಯಾಂಕ್ ಸಹ ಈ ಮಾರ್ಗಸೂಚಿಗಳ ಉಲ್ಲಂಘನೆಯ ಮೇಲ್ವಿಚಾರಣೆ ಮಾಡಬೇಕು ಎಂದು ಸಿಎಂ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx